oplus_2 
ಜಿಲ್ಲೆ

ಕಲ್ಯಾಣ ಕರ್ನಾಟಕ ಅಭಿವೃದ್ಧಿಯೇ ಮುಖ್ಯ ಧ್ಯೇಯ: ಸಚಿವ ಶರಣಪ್ರಕಾಶ ಪಾಟೀಲ್ ಅಭಿಪ್ರಾಯ

ರಾಯಚೂರು: ನಗರದ ಪ್ರೇಕ್ಷಣೀಯ ಸ್ಥಳಗಳಲ್ಲೊಂದಾದ ಐತಿಹಾಸಿಕ ಮಾವಿನ ಕೆರೆ ಅಭಿವೃದ್ಧಿಗೆ ಚಾಲನೆ ನಿಡಲಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.

ನಗರದ ಖಾಸಭಾವಿ ಹತ್ತಿರ ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆ ಅನುದಾನದಲ್ಲಿ ಮಾವಿನಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಸೋಮವಾರ ಮಾತನಾಡಿ, ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ ರಾಜ್ಯ ಸರ್ಕಾರದ ಮುಖ್ಯ ಧ್ಯೇಯವಾಗಿದ್ದು, ಈ ಭಾಗದ ಜನರಿಗೆ ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗಗಳನ್ನು ನೀಡಲು ಕೆಕೆಆರ್‌ಡಿಬಿಯಿಂದ ಪ್ರತಿ ವರ್ಷ ಹೆಚ್ಚಿನ ಅನುದಾನವನ್ನು ನೀಡುವ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ. 371 ವಿಶೇಷ ಕಾನೂನನ್ನು ಜಾರಿಗೆ ತರುವ ಮೂಲಕ ಈ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ನೀಡಲು ಕಾಂಗ್ರೆಸ್ ಸರ್ಕಾರ ಅನುಕೂಲ ಮಾಡಿಕೊಟ್ಟಿದೆ ಎಂದು ಹೇಳಿದರು.

ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ನಿಯೋಗ ತೆರಳಿ ಮನವಿ ಮಾಡಲಾಗಿದ್ದು, ಕೇಂದ್ರ ಸರ್ಕಾರದಿಂದ ಮಂಜೂರಾದ ಕೂಡಲೇ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡಲು ಸರ್ಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಜತೆಗೆ ವಿಮಾನ ನಿಲ್ದಾಣಕ್ಕಾಗಿ ಇದ್ದ ಎಲ್ಲ ತೊಡಕುಗಳನ್ನು ನಿವಾರಿಸಲಾಗಿದ್ದು, ವಿಮಾನ ನಿಲ್ದಾಣಕ್ಕೆ ಬೇಕಾದ ಎಲ್ಲ ಅನುಮತಿಗಳನ್ನು ಪಡೆದುಕೊಳ್ಳಲಾಗಿದೆ ಶೀಘ್ರವೇ ವಿಮಾನ ನಿಲ್ದಾಣ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ಮಾತನಾಡಿ, ರಾಯಚೂರಿನ ಐತಿಹಾಸಿಕತೆಯನ್ನು ಉಳಿಸಲು ಮಾವಿನ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪಕ್ಷಾತೀತವಾಗಿ ಕೆಲಸ ಮಾಡಲಾಗುತ್ತದೆ. ಮಾವಿನ ಕೆರೆ 115.18 ಎಕರೆ ಇದ್ದು, ಕೆರೆಯ ಅಭಿವೃದ್ಧಿಗೆ 50 ಕೋಟಿ ರೂ.ವೆಚ್ಚವಾಗಲಿದೆ ಎಂದು ತಿಳಿಸಿದರು.

ನಗರ ಶಾಸಕ ಡಾ.ಶಿವರಾಜ ಪಾಟೀಲ್ ಮಾತನಾಡಿ, ಮಾವಿನ ಕೆರೆ ಎಂಬುವುದು ಗೊಂದಲದ ಗೂಡಾಗಿದೆ, ಕೆರೆಯ ಸುತ್ತಲಿನ ಪ್ರದೇಶವನ್ನು ಕಾಯುವುದೇ ದೊಡ್ಡ ಸವಾಲಾಗಿದೆ. ಮಾವಿನ ಕೆರೆಯಲ್ಲಿ ಕಲುಷಿತ ನೀರು ಸೇರಿಕೊಂಡು ಕೆರೆಯ ಹೂಳು ಕೂಡ ವಿಷಕಾರಿಯಾಗಿ ಬಿಟ್ಟಿದೆ. ಮುಂದಿನ ಬೇಸಿಗೆಯಲ್ಲಿ ಕೆರೆ ಹೂಳು ಸ್ವಚ್ಛಗೊಳಿಸಿ ಕೆರೆಗೆ ಸ್ವಚ್ಛವಾದ ನೀರು ತುಂಬಿಸುವ ಕೆಲಸವನ್ನು ಕೈಗೆತ್ತಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ಸೋಮವಾರಪೇಟೆ ಹಿರೆಮಠದ ಅಭಿನವ ರಾಚೋಟಿ ವೀರ ಶಿವಾಚಾರ್ಯ ಸ್ವಾಮೀಜಿ, ವೀರಗೋಟದ ಅಡವಿಲಿಂಗ ಸ್ವಾಮೀಜಿ, ಬ್ರಹ್ಮಕುಮಾರಿ ಈಶ್ವರೀಯಾ ವಿಶ್ವವಿದ್ಯಾಲಯದ ಮುಖ್ಯಸ್ಥೆ ಸ್ಮಿತಾ ಅಕ್ಕ, ಅರ್ಚಕ ಪವನ ಆಚಾರ, ಮುಸ್ಲಿಂ ಸಮುದಾಯದ ಪ್ರಮುಖರಾದ ಅಮೀರುದ್ದಿನ್ ಖಾದ್ರಿ, ರಫೀಕ ಮೌಲಾನಾ, ಕೃಸ್ತ ಧರ್ಮದ ಪ್ರಮುಖ ವರಪ್ರಸಾದ್, ಮಾನ್ವಿ ಶಾಸಕ ಹಂಪಯ್ಯ ನಾಯಕ, ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಎಂಎಲ್ಸಿಗಳಾದ ಎ.ವಸಂತಕುಮಾರ, ಚಂದ್ರಶೇಖರ ಪಾಟೀಲ್, ಬಸನಗೌಡ ಬಾದರ್ಲಿ, ನಗರಸಭೆ ಅಧ್ಯಕ್ಷೆ ನರಸಮ್ಮ ಮಾಡಗಿರಿ, ಆರ್‌ಡಿಎ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಡಿಸಿ ಕೆ.ನಿತೀಶ, ಜಿ.ಪಂ ಸಿಇಒ ರಾಹುಲ್ ತುಕಾರಾಂ ಪಾಂಡ್ವೆ ಸೇರಿದಂತೆ ಇತರರಿದ್ದರು.