ಜಿಲ್ಲೆ

ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಿ: ಎಡಿಸಿ ಶಿವಾನಂದ ಭಜಂತ್ರಿ

ರಾಯಚೂರು: ಜಿಲ್ಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲು ಎಲ್ಲ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಬುಧವಾರ ಮಾತನಾಡಿ, ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವವನ್ನು ಆಚರಣೆ ಮಾಡಲಾಗುವುದು ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು.

ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಲಿದೆ. ಕಾರ್ಯಕ್ರಮದ ವಿವಿಧ ಕಾರ್ಯ ಸಮಿತಿಗಳು ತಮಗೆ ನೀಡಲಾದ ಜವಾಬ್ದಾರಿಯನ್ನು ನಿರ್ವಹಿಸಬೇಕು. ನಗರದ ಪ್ರಮುಖ ರಸ್ತೆಗಳು, ವೃತ್ತಗಳನ್ನು ಸ್ವಚ್ಛಗೊಳಿಸಿ ಅಲಂಕರಿಸಬೇಕು ಎಂದರು.

ಕ್ರೀಡಾಂಗಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಬೇಕು. ಆರೋಗ್ಯ ಇಲಾಖೆಯಿಂದ ವೈದ್ಯಕೀಯ ಸೇವೆ ಹಾಗೂ ಆಂಬುಲೆನ್ಸ್ ವ್ಯವಸ್ಥೆ ಮಾಡಿಕೊಳ್ಳಬೇಕು. ಮುಂಜಾಗೃತಾ ಕ್ರಮವಾಗಿ ಅಗ್ನಿ ಶಾಮಕದಳ ಸೇರಿದಂತೆ ಇನ್ನಿತರ ಸುರಕ್ಷತೆ ಮತ್ತು ಭದ್ರತೆಯ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ ತಿಳಸಿದರು.

ಈ ಸಂದರ್ಭದಲ್ಲಿ ಡಿವೈಎಸ್ಪಿ ಪ್ರಮಾನಂದ ಘೋಡ್ಕೆ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಕರಗೌಡ ಪಾಟೀಲ್, ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆಯ ಸಹಾಯಕ ನಿರ್ದೇಶಕ ವೀರೇಶ ನಾಯಕ, ಜಿಲ್ಲಾ ಕೈಗಾರಿಕಾ ಇಲಾಖೆಯ ಅಧಿಕಾರಿ ಬಸವರಾಜ್ ಯಂಕಂಚಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ದತ್ತಪ್ಪ ಸಾಗೂರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.