ರಾಯಚೂರು: ಜಿಲ್ಲೆಯಲ್ಲಿ ಮೆಣಸಿನಕಾಯಿ ಬೆಳೆಯುವ ರೈತರಿಗೆ ಅನುಕೂಲ ಕಲ್ಪಿಸಲು ನಗರದ ಹತ್ತಿ ಮಾರುಕಟ್ಟೆಯಲ್ಲಿ ಎಪಿಎಂಸಿಯಿಂದ ಡಿ.25ರಿಂದ ಮೆಣಸಿನಕಾಯಿ ಮಾರುಕಟ್ಟೆ ಆರಂಭಿಸಲಾಗುವುದು ಎಂದು ಶಾಸಕ ಡಾ.ಶಿವರಾಜ ಪಾಟೀಲ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದರು. ಜಿಲ್ಲೆಯ ರೈತರು ಮೆಣಸಿನಕಾಯಿ ಮಾರಾಟಕ್ಕಾಗಿ ಬ್ಯಾಡಗಿ ಸೇರಿ ದೂರದ ಇತರ ಮಾರುಕಟ್ಟೆಗಳಿಗೆ ಹೋಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಮಾರುಕಟ್ಟೆ ಸೌಲಭ್ಯ ಕಲ್ಪಿಸಲಾಗುತ್ತಿದೆ. ದೇವದುರ್ಗ, ಲಿಂಗಸುಗೂರು ಮತ್ತು ರಾಯಚೂರು ತಾಲೂಕುಗಳ ಹೆಚ್ಚಿನ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆಯಲಾಗುತ್ತಿದೆ. ಕೇಂದ್ರ ಸರ್ಕಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ರಾಯಚೂರಿಗೆ ಮೆಣಸಿನಕಾಯಿಯನ್ನು ಆಯ್ಕೆ ಮಾಡಿದ್ದು, ಸ್ಥಳೀಯ ಮಾರುಕಟ್ಟೆ ದೊರೆತಲ್ಲಿ ರೈತರಿಗೆ ಅನುಕೂಲವಾಗಲಿದೆ ಎಂದರು.
ಪ್ರಸ್ತುತ ಪ್ರತಿ ಭಾನುವಾರ ಮೆಣಸಿನಕಾಯಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗುವುದು. ನಂತರ ವಹಿವಾಟು ನೋಡಿಕೊಂಡು ವಾರದಲ್ಲಿ ಎರಡು ದಿನ ಅಥವಾ ಪ್ರತಿದಿನ ವ್ಯಾಪಾರಕ್ಕೆ ವ್ಯವಸ್ಥೆ ಮಾಡಲಾಗುವುದು. ಸುಸಜ್ಜಿತ ಮೆಣಸಿನಕಾಯಿ ಮಾರುಕಟ್ಟೆ ನಿರ್ಮಾಣಕ್ಕಾಗಿ ಸರ್ಕಾರಕ್ಕೆ 33 ಕೋಟಿ ರೂ., ನಾಲ್ಕು ಎಕರೆ ಪ್ರದೇಶದಲ್ಲಿ ಕೋಲ್ಡ್ ಸ್ಟೋರೇಜ್ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.