ಗುರುಗುಂಟಾದ ವಿದ್ಯುತ್ ವಿತರಣಾ ಕೇಂದ್ರದ ನೋಟ.  
ರಾಯಚೂರು

ಹಳ್ಳಿಗಳಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ, ಜನರಿಗೆ ಕಿರಿಕಿರಿ

ಹಟ್ಟಿಚಿನ್ನದಗಣಿ: ಸಮೀಪದ ಗುರುಗುಂಟಾ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದೊಂದು ವಾರದಿಂದ ವಿದ್ಯುತ್ ಕಣ್ಣಾಮುಚ್ಚಾಲೆ ಆಟ, ಸಾರ್ವಜನಿಕರು ಹಾಗೂ ರೈತರ ಆಕ್ರೋಶಕ್ಕೆ ಕಾರಣವಾಗಿದೆ. 
ಬಿಸಿಲಿನಿಂದ ಜನರು ಸಂಕಷ್ಟ ಅನುಭವಿಸುತ್ತಿರುವ ಸಂದರ್ಭದಲ್ಲಿ ಪದೇಪದೆ ವಿದ್ಯುತ್ ಕಡಿತಗೊಳಿಸುತ್ತಿರುವುದು ಕಿರಿಕಿರಿ ಉಂಟು ಮಾಡುತ್ತಿದೆ. ಗುರುಗುಂಟಾ, ಗೌಡೂರು, ಗೌಡೂರು ತಾಂಡಾ, ಮಾಚನೂರು, ಹೊಸಗುಡ್ಡ, ಬೆಂಚಲದೊಡ್ಡಿ ಸೇರಿದಂತೆ 15ಕ್ಕೂ ಹೆಚ್ಚು ದೊಡ್ಡಿ ಮತ್ತು ತಾಂಡಾಗಳಲ್ಲಿ ಅನಿಯಮಿತ ಲೋಡ್‌ಶೆಡ್ಡಿಂಗ್‌ನಿಂದ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಗೌಡೂರು ಬಸ್ ನಿಲ್ದಾಣದ ಸಮೀಪವಿರುವ ವಿದ್ಯುತ್ ಕಂಬವು ಹಲವು ದಿನಗಳಿಂದ ಬಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ. ಯಾವುದೇ ಕ್ಷಣದಲ್ಲಿ ಅಪಾಯ ಸಂಭವಿಸುವ ಸಾಧ್ಯತೆ ಇದ್ದು, ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. 
ನಿರಂತರ ವಿದ್ಯುತ್ ವ್ಯತ್ಯಯದಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿವ ನೀರಿನ ಪೂರೈಕೆ ಮೇಲೂ ಪರಿಣಾಮ ಬೀರಿದೆ. ಮೋಟಾರ್‌ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದ ಕಾರಣ ಗ್ರಾಮಗಳಿಗೆ ನೀರು ಸರಬರಾಜಿನಲ್ಲಿ ಸಮಸ್ಯೆಯಾಗಿದೆ.  ತಕ್ಷಣ ಜೆಸ್ಕಾಂ ಅಧಿಕಾರಿಗಳು ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಇನ್ನೊಂದೆಡೆ ರೈತರ ಜಮೀನುಗಳಲ್ಲಿ ವಿದ್ಯುತ್ ತಂತಿಗಳು ಜೋತು ಬಿದ್ದಿರುವುದರಿಂದ ಕೃಷಿ ಚಟುವಟಿಕೆ ಹಾಗೂ ಮುಂಗಾರು ಬಿತ್ತನೆ ಕಾರ್ಯ ಕೈಗೊಳ್ಳುವುದು ಕಷ್ಟಕರವಾಗಿದೆ. ಜೆಸ್ಕಾಂ ತಕ್ಷಣ ಎಚ್ಚೆತ್ತುಕೊಂಡು ವಿದ್ಯುತ್ ಸಮಸ್ಯೆ ನಿವಾರಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ಎದುರಿಸಬೇಕಾಗಬಹುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
"

ಪದೇಪದೆ ವಿದ್ಯುತ್ ಕಡಿತದಿಂದ ಬೋರ್‌ವೆಲ್‌ಗಳಲ್ಲಿ ನೀರಿದ್ದರೂ ಜಮೀನುಗಳಿಗೆ ಹಾಯಿಸಲು ಸಾಧ್ಯವಾಗುತ್ತಿಲ್ಲ. ಮುಂಗಾರು ಮಳೆಯೂ ಕಾರಣ ಕೈಕೊಟ್ಟರೆ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಮೂರು ತಿಂಗಳ ಹಿಂದೆ ಸುಟ್ಟುಹೋದ ಟಿಸಿಯನ್ನು ಈವರೆಗೆ ಬದಲಿಸಿಲ್ಲ. ಈ ಕುರಿತು ಜೆಸ್ಕಾಂ ಅಧಿಕಾರಿಗಳು ಗಮನಹರಿಸಬೇಕು.

— ಬಸವರಾಜ ಅಂಗಡಿ ತಾಲೂಕು ಪ್ರಧಾನ ಕಾರ್ಯದರ್ಶಿ, ರೈತ ಸಂಘ
"

ವಿದ್ಯುತ್ ಪರಿವರ್ತಕ ರಿಪೇರಿಗೆ ನೀಡಲಾಗಿದೆ. ಆದಷ್ಟು ಬೇಗ ಗ್ರಾಮಗಳಲ್ಲಿ ವಿದ್ಯುತ್ ಪರಿವರ್ತಕ ಅಳವಡಿಸಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡುತ್ತೇವೆ. ಸಾರ್ವಜನಿಕರು ಹಾಗೂ ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ.

— ಶರಣಬಸವ ಜೆಸ್ಕಾಂ ಜೆಇ, ಗುರುಗುಂಟಾ