ಮಹಾನಗರ ಪಾಲಿಕೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ರಾಯಚುರಿನ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಬೃಹತ್ ತ್ಯಾಜ್ಯ ನಿರ್ವಹಣೆ ಕುರಿತು ಶಾಲಾ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು. 
ರಾಯಚೂರು

ಪಾಲಿಕೆಯಿಂದ ಚಿತ್ರಕಲಾ ಸ್ಪರ್ಧೆ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ

ರಾಯಚೂರು ಮಹಾನಗರ ಪಾಲಿಕೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ನಗರದ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಬೃಹತ್ ತ್ಯಾಜ್ಯ ನಿರ್ವಹಣೆ ಕುರಿತು ಶಾಲಾ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಯಿತು.
ನಗರದ ವಿವಿಧ ಶಾಲೆಗಳ 8 ರಿಂದ 10ನೇ ತರಗತಿಯ ಸುಮಾರು 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಪರಿಸರ ಕಾಳಜಿ, ಸ್ವಚ್ಛತೆ ಮತ್ತು ತ್ಯಾಜ್ಯ ನಿರ್ವಹಣೆ ಕುರಿತ ತಮ್ಮ ಕಲ್ಪನೆಗಳನ್ನು ಚಿತ್ರಗಳ ಮೂಲಕ ವ್ಯಕ್ತಪಡಿಸಿದರು.
ಚಿತ್ರಕಲೆ ಸ್ಪರ್ಧೆ ಕುರಿತು ಮಹಾನಗರ ಪಾಲಿಕೆಯ ವಲಯ ಆಯುಕ್ತ ಮಲ್ಲಿಕಾರ್ಜುನ ಬಿ.ಎಂ. ಮಾತನಾಡಿ, ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯೇ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದ್ದು, ನಗರದಲ್ಲಿ ಹಲವು ಕಡೆಗಳಲ್ಲಿ ಕಸವನ್ನು ಎಲ್ಲೆಂದರಲ್ಲಿ ಎಸೆಯುವ ಪರಿಣಾಮ ಬ್ಲಾಕ್‌ಸ್ಪಾಟ್ ಗಳು ನಿರ್ಮಾಣವಾಗುತ್ತಿವೆ. ತ್ಯಾಜ್ಯದ ಸಮರ್ಪಕ ವಿಲೇವಾರಿ ಹಾಗೂ ನಿರ್ವಹಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪಾಲಿಕೆ ವಿವಿಧ ಕಾರ್ಯಕ್ರಮಗ ಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.
ಶಿಕ್ಷಕ ಸಂತೋಷ ಕುಮಾರ ಮಾತನಾಡಿ, ವಿಶ್ವ ಪರಿಸರ ದಿನದ ಅಂಗವಾಗಿ ಚಿತ್ರಕಲಾ ಸ್ಪರ್ಧೆ ಆಯೋಜಿಸಿರುವ ಮಹಾನಗರ ಪಾಲಿಕೆಯ ಕಾರ್ಯ ಶ್ಲಾಘನೀಯ. ಪರಿಸರ ವಿಲ್ಲದೆ ಜೀವಿಸಲು ಸಾಧ್ಯವಿಲ್ಲ. ಮಕ್ಕಳಲ್ಲಿ ಪರಿಸರದ ಬಗ್ಗೆ ಅರಿವು ಮತ್ತು ಕಾಳಜಿ ಬೆಳೆಸಿದರೆ, ಮುಂದಿನ ಪೀಳಿಗೆ ಪರಿಸರ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.