ರಾಯಚೂರಿನ ಜಿಲ್ಲಾಧಿಕಾರಿಗಳ ಭವನದಲ್ಲಿ ಶನಿವಾರ ಎಡಿಸಿ ಶಿವಾನಂದ ಭಜಂತ್ರಿ ಅಧ್ಯಕ್ಷತೆಯಲ್ಲಿ ಪಿಯುಸಿ ಪರೀಕ್ಷೆಯ ಪೂರ್ವಭಾವಿ ಸಭೆ ನಡೆಯಿತು.ಎಎಸ್ಪಿ ಕುಮಾರ ಸ್ವಾಮಿ, ಪಿಯು ಡಿಡಿಪಿಯು ಸೋಮಶೇಖರಪ್ಪ ಹೋಕ್ರಾಣಿ ಇದ್ದರು. 
ರಾಯಚೂರು

ಪರೀಕ್ಷೆ ಸಿದ್ಧತೆಯ ಪೂರ್ವಭಾವಿ ಸಭೆ ಪಿಯು ಪರೀಕ್ಷೆಯು ವ್ಯವಸ್ಥಿತ, ಪಾರದರ್ಶಕವಾಗಿ ನಡೆಯಲಿ: ಎಡಿಸಿ ಶಿವಾನಂದ

ರಾಯಚೂರು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಫೆ.28 ರಿಂದ ಆರಂಭವಾಗಿ ಮಾರ್ಚ್ 17ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಭವನದಲ್ಲಿ ಶನಿವಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಿದ್ಧತೆ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಯಾವುದೇ ರೀತಿಯ ಗೊಂದಲಕ್ಕೆ ಅವಕಾಶವಿರದಂತೆ, ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸಬೇಕು. ಪರೀಕ್ಷೆಗೆ ಮೇಲ್ವಿಚಾರಕರ ನಿಯೋಜನೆ, ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿ ನಿಯೋಜನೆ ಸೇರಿದಂತೆ ಪಿಯು ಪರೀಕ್ಷಾ ಪ್ರಾಧಿಕಾರದ ನಿರ್ದೇಶನವನ್ನು ಚಾಚೂ ತಪ್ಪದೆ ಪಾಲಿಸುವಂತೆ ಸಂಬಅಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.
ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಸುವುದು ಸೇರಿದಂತೆ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಬೇಕು. ಪರೀಕ್ಷಾ ಕೇಂದ್ರಗಳ ಚಲನವಲನಕ್ಕೆ ಸಂಬಅಧಿಸಿದಅತೆ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ಹಾಗೂ ಕೊಠಡಿ ಸಂಖ್ಯೆ ಖಾತರಿ ಪಡಿಸಿಕೊಳ್ಳಲು ಪರೀಕ್ಷಾ ಕೇಂದ್ರದಲ್ಲಿ ಮಾಹಿತಿ ಒದಗಿಸುವಂತಾಗಬೇಕು ಎಂದರು.
ಪರೀಕ್ಷಾ ದಿನಗಳಲ್ಲಿ ಅಗತ್ಯ ವಾಹನ ನಿಯೋಜಿಸುವುದು ಜೊತೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳುವುದು, ಆರೋಗ್ಯ ಇಲಾಖೆಯಿಂದ ಶುಶ್ರೂಷಕರನ್ನು ನೇಮಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಎಎಸ್ಪಿ ಕುಮಾರಸ್ವಾಮಿ ಮಾತನಾಡಿ, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಬಂಧಕ ಜಾರಿಗೊಳಿಸಲಾಗುತ್ತದೆ. ಹಾಗೆಯೇ ಪರೀಕ್ಷಾ ದಿನಗಳಂದು ಜೆರಾಕ್ಸ್ ಅಂಗಡಿಗಳನ್ನು ಸಹ ಮುಚ್ಚಿಸಲಾಗುತ್ತದೆ ಎಂದರು.
ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸೋಮುಶೇಖರಪ್ಪ ಹೋಕ್ರಾಣಿ ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ 22,442 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯಲಿದ್ದು, ಮೊದಲ ಬಾರಿಗೆ 18,419 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 560 ಖಾಸಗಿಯಾಗಿ ಹಾಗೂ 3,450 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಜಿಲ್ಲೆಯ 43 ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ತಾಲೂಕಿನ ತಹಶಿಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಕಾಲೇಜಿನ ಪ್ರಾಂಶುಪಾಲರು, ಹಿರಿಯ ಉಪನ್ಯಾಸಕರು ಸೇರಿ ಅನೇಕರು ಇದ್ದರು.