ಜಿಲ್ಲೆ

ಜಿಲ್ಲೆಯಲ್ಲಿ ಕಡಿಮೆಯಾದ ಮಳೆ ಅಬ್ಬರ

ಸುನಿಲ್ ಪೊನ್ನೇಟಿ

ಮಡಿಕೇರಿ:

ಕೊಡಗಿನಲ್ಲಿ ಬುಧವಾರ ಮಳೆಯ ಅಬ್ಬರ ಸ್ವಲ್ಪ ಕಡಿಮೆ ಆಗಿತ್ತು. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಆಗಾಗ್ಗೆ ಬಿಡುವು ತೆಗೆದುಕೊಂಡು ಮಳೆ ದರ್ಶನ ನೀಡುತ್ತಿತ್ತು. ಕುಶಾಲನಗರ, ಸೋಮವಾರಪೇಟೆ ಸೇರಿದಂತೆ ಹಲವೆಡೆ ಸ್ವಲ್ಪ ಬಿಸಿಲಿನ ವಾತಾವರಣವೂ ಕಂಡು ಬಂತು. ಕಾವೇರಿ ಉಗಮ ಸ್ಥಾನ ತಲಕಾವೇರಿ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಿದ್ದು, ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಇಳಿಯುತ್ತಿದೆ.

ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 39.92 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.07 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗೆ 1029.43 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 504.49 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲೂಕಿನಲ್ಲಿ 54.25 ಮಿ.ಮೀ., ವಿರಾಜಪೇಟೆ ತಾಲೂಕಿನಲ್ಲಿ 48.25 ಮಿ.ಮೀ., ಪೊನ್ನಂಪೇಟೆ ತಾಲೂಕಿನಲ್ಲಿ 36.45 ಮಿ.ಮೀ., ಸೋಮವಾರಪೇಟೆ ತಾಲೂಕಿನಲ್ಲಿ 43.55 ಮಿ.ಮೀ. ಹಾಗೂ ಕುಶಾಲನಗರ ತಾಲೂಕಿನಲ್ಲಿ 17.10 ಮಿ.ಮೀ. ಸರಾಸರಿ ಮಳೆಯಾಗಿದೆ.

ಭಾಗಮಂಡಲ ಹೋಬಳಿಯಲ್ಲಿ ಅತೀ ಹೆಚ್ಚು ಅಂದರೆ 91.20 ಮಿ.ಮೀ. ಮಳೆ ದಾಖಲಾಗಿದೆ. ಉಳಿದಂತೆ ಮಡಿಕೇರಿ ಕಸಬಾ 32, ನಾಪೋಕ್ಲು 50.80, ಸಂಪಾಜೆ 43, ವಿರಾಜಪೇಟೆ 49, ಅಮ್ಮತ್ತಿ 47.50, ಹುದಿಕೇರಿ 36.80, ಶ್ರೀಮಂಗಲ 31, ಪೊನ್ನಂಪೇಟೆ 33, ಬಾಳೆಲೆ 45, ಸೋಮವಾರಪೇಟೆ 30.20, ಶನಿವಾರಸಂತೆ 28, ಶಾಂತಳ್ಳಿ 80, ಕೊಡ್ಲಿಪೇಟೆ 36, ಕುಶಾಲನಗರ 7 ಹಾಗೂ ಸುಂಟಿಕೊಪ್ಪ ಹೋಬಳಿಯಲ್ಲಿ 27.20 ಮಿ.ಮೀ. ಮಳೆಯಾಗಿದೆ.

2859 ಅಡಿ ಎತ್ತರದ ಹಾರಂಗಿ ಅಣೆಕಟ್ಟೆಯಲ್ಲಿ ಬುಧವಾರದ ಮಾಹಿತಿ ಪ್ರಕಾರ 2849.22 ಅಡಿ ನೀರಿದೆ. ಒಳಹರಿವು 7888 ಕ್ಯೂಸೆಕ್ ಇದ್ದು, ನದಿಗೆ 12166 ಕ್ಯೂಸೆಕ್ ನೀರು ಬಿಡಲಾಗುತ್ತಿದೆ.