ಕುಷ್ಟಗಿ: ಮಳೆಯಿಂದ ಅನಾಹುತಗಳಾದಲ್ಲಿ ಕೂಡಲೇ ಸ್ಪಂದಿಸಿ ಪರಿಹಾರ ಕ್ರಮ ಕೈಗೊಳ್ಳುವ ಕಾರ್ಯವಾಗಬೇಕಿದೆ ಎಂದು ತಹಸೀಲ್ದಾರ್ ರಾಘವೇಂದ್ರರಾವ್ ಹೇಳಿದರು.
ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಪಟ್ಟಣದ ತಹಸಿಲ್ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಮುಂಗಾರು ಮಳೆ ಆರಂಭವಾಗುತ್ತಿದ್ದು, ಸಿಡಿಲಿಗೆ ಅಲ್ಲಲ್ಲಿ ಜೀವ ಹಾನಿ ಸಂಭವಿಸುತ್ತಿವೆ. ಸಿಡಿಲಿನಿಂದ ತಪ್ಪಿಸಿಕೊಳ್ಳಲು ರೈತರಿಗೆ ಹಾಗೂ ಜನರಿಗೆ ತಿಳಿವಳಿಕೆ ಮೂಡಿಸಬೇಕು. ಅತೀಯಾದ ಮಳೆಯಿಂದ ಮನೆ, ಬೆಳೆ ಹಾನಿಯಾದರೆ ಮೊದಲ ಆದ್ಯತೆ ಮೇರೆಗೆ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದರು.
ತಾಪಂ ಇಒ ಶಿವಪ್ಪ ಸುಬೇದಾರ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಎಇಇ ಸಂಜೀವಕುಮಾರ್, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ದುರ್ಗಾಪ್ರಸಾದ್, ತಾಲೂಕು ಆರೋಗ್ಯಾಧಿಕಾರಿ ಆನಂದ್ ಗೋಟೂರು, ಪುರಸಭೆ ಮುಖ್ಯಾಧಿಕಾರಿ ಧರಣೇಂದ್ರಕುಮಾರ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.