ಮದ್ದೂರು: ತಾಲೂಕಿನ ವಳಗೆರೆಹಳ್ಳಿ ಗ್ರಾಮದ ಹೆಬ್ಬಾಳ ಏರಿ ಒಡೆದು ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದ ಪರಿಣಾಮ ಬೆಳೆಗಳು ಹಾಳಾಗಿದೆ. ಎರಡು ದಿನಗಳಿಂದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹೆಬ್ಬಾಳದಲ್ಲಿ ನೀರು ತುಂಬಿಕೊಂಡಿತ್ತು. ಸುಮಾರು 200 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಭತ್ತ, ಕಬ್ಬು ಹಾಗೂ ತೆಂಗಿನ ಬೆಳೆಗಳು ಜಲಾವೃತವಾಗಿ ಅವಾಂತರ ಸೃಷ್ಟಿಸಿದೆ.
ತಹಸೀಲ್ದಾರ್ ಟಿ.ಎನ್.ನರಸಿಂಹಮೂರ್ತಿ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಎಂ.ರೇಖಾ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪರಮೇಶ್, ರೇಷ್ಮೆ ಇಲಾಖೆಯ ಸುರೇಶ್, ನೀರಾವರಿ ಇಲಾಖೆಯ ನಾಗರಾಜು ಆಗಮಿಸಿ ಸ್ಥಳ ಪರಿಶೀಲನೆ ಮಾಡಿದರು.
ರೈತ ಮುಖಂಡರಾದ ದಯಾನಂದ್, ಉಮೇಶ್ ಅವರು ನೀರು ಹರಿದು ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದ್ದು, ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು.