ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮುಂದಿನ ಮುರ್ನಾಲ್ಕು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ದಕ್ಷಿಣ ಕನ್ನಡದ ಮಂಗಳೂರು, ದಾವಣಗೆರೆ, ಗದಗ, ಕಲಬುರಗಿಯ ಗಂಗಾಪುರ ಸೇರಿ ರಾಜ್ಯದ ಕೆಲವೆಡೆ ಸೋಮವಾರ ವರ್ಷಧಾರೆಯಾಗಿದೆ.
ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ರಾಮನಗರದಲ್ಲಿ ಡಿ.13ರಂದು ಹಾಗೂ ದಕ್ಷಿಣ ಕನ್ನಡ, ಉಡುಪಿಯಲ್ಲಿ ಡಿ.14ರಂದು ಬಿರುಸಾಗಿ ಮಳೆಯಾಗುವ ಸಂಭವ ಇರುವುದರಿಂದ ಇಲಾಖೆ ಯೆಲ್ಲೋ ಅರ್ಲಟ್ ಕೊಟ್ಟಿದೆ. ಕರಾವಳಿ, ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 2 ದಿನ ಸಾಧಾರಣ ಮಳೆಯಾಗಲಿದೆ.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಸರಾಸರಿ 2 ಡಿ.ಸೆ.ಉಷ್ಣಾಂಶ ಕುಸಿತವಾಗಲಿದೆ. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರಿನಲ್ಲಿ ಸೋಮವಾರ ಕನಿಷ್ಠ ತಾಪಮಾನದಲ್ಲಿ 4ರಿಂದ 6 ಡಿ.ಸೆ.ಉಷ್ಣಾಂಶ ಕುಸಿತವಾಗಿದೆ. ಚಿಕ್ಕಮಗಳೂರಿನಲ್ಲಿ 13.4 ಡಿ.ಸೆ.ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಕ್ರಮವಾಗಿ 30 ಮತ್ತು 18 ಡಿ.ಸೆ. ಇರಲಿದೆ.