ಕಾರವಾರ: ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದ್ದು, ನೆರೆ ಇಳಿಮುಖವಾಗಿದೆ. ಎಲ್ಲ ಕಾಳಜಿ ಕೇಂದ್ರಗಳಲ್ಲಿದ್ದ ಜನ ತಮ್ಮ ಮನೆಗಳಿಗೆ ತೆರಳಿದ್ದಾರೆ. ಜು.11 ರಂದು ಇದೇ ರೀತಿಯ ವಾತಾವರಣ ಇರಲಿದ್ದು, ಜು.12 ಹಾಗೂ 13 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಆರೇಂಜ್ ಅಲರ್ಟ್ ಘೋಷಿಸಿದೆ. ಬುಧವಾರ ಬೆಳಗ್ಗೆ ಕಾರವಾರದಲ್ಲಿ ಭಾರಿ ಮಳೆ ಸುರಿಯಿತು. ಇದರಿಂದ ಕಾರವಾರದ ಅರಗಾ ನೌಕಾನೆಲೆಯ ಎದುರು ನೀರು ನಿಂತು ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ಬುಧವಾರದ ವರದಿಯಂತೆ ಹಿಂದಿನ 24 ಗಂಟೆಗಳ ಅವಽಯಲ್ಲಿ 2 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಜಿಲ್ಲೆಯಲ್ಲಿ ಜೂನ್ 1 ರಿಂದ ಇದುವರೆಗೆ 8 ಮನೆಗಳು ಸಂಪೂರ್ಣವಾಗಿ ಬಿದ್ದು ಹೋಗಿದ್ದು, 18 ಮನೆಗಳಿಗೆ ತೀವ್ರ ಹಾನಿಯಾಗಿದೆ. 119 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 830 ಮನೆಗಳಿಗೆ ನೀರು ನುಗ್ಗಿತ್ತು. 809 ಜನರು ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದರು.