ಜಿಲ್ಲೆ

ಆ.2ರಿಂದ ರಾಜ್ಯದಲ್ಲಿ ಮಳೆ ಇಳಿಕೆ: ಹವಾಮಾನ ಇಲಾಖೆ ಮಾಹಿತಿ

ಹರೀಶ್​​ ಕೆ.ಸಿ.

ಬೆಂಗಳೂರು:ರಾಜ್ಯದ ಹಲವಡೆ ಸುರಿಯುತ್ತಿರುವ ಮಳೆ, ಆ.2ರಿಂದ ಇಳಿಮುಖಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ದಕ್ಷಿಣ ಕರ್ನಾಟಕ,ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಮಳೆ ಕ್ಷೀಣವಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ 3 ದಿನ ಹಾಗೂ ಕೊಡಗು, ಚಿಕ್ಕಮಗಳೂರು, ಹಾಸನ,ಶಿವಮೊಗ್ಗದಲ್ಲಿ ಮುಂದಿನ 48 ಗಂಟೆ ಭಾರಿ ಮಳೆಯಾಗುವ ಸಂಭವ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ನಂತರ, ಆ ಭಾಗಗಳಲ್ಲೂ ಮಳೆ ಕಡಿಮೆಯಾಗಲಿದೆ.

ಬೆಂಗಳೂರು ನಗರ, ಬೆಂ.ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಚಾಮರಾನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬಳ್ಳಾರಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ವಿಜಯಪುರದಲ್ಲಿ ಮುಂದಿನ 5 ದಿನ ಭಾಗಶಃ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದೆ. ಈ ಅವಧಿಯಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.

ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅಬ್ಬರಿಸುತ್ತಿರುವ ಮಳೆ, ಮುರ‌್ನಾಲ್ಕು ದಿನ ಬಳಿಕ ಇಳಿಕೆಯಾಗುತ್ತದೆ. 2 ವಾರದಿಂದ 20 ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕವಾಗಿ ಸುರಿದಿದೆ. ಕರಾವಳಿ ಕರ್ನಾಟಕದಲ್ಲಿ ತುಸು ಜೋರಾಗಿ ಸುರಿದಿತ್ತು.

| ಸಿ.ಎಸ್.ಪಾಟೀಲ್, ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ.