ವಿಜಯಪುರ: ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಹಾಗೂ ಶಾಲೆ-ಕಾಲೇಜಿನ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಮಾದಕ ದ್ರವ್ಯ ನಿರ್ಮೂಲನೆ ಕುರಿತ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ತಮ್ಮ ವ್ಯಾಪ್ತಿಯ ಶಾಲೆ-ಕಾಲೇಜ್‌ಗಳ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಬೇಕು. ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಕ್ರಮ ವಹಿಸುವಂತೆ ಅವರು ಸೂಚಿಸಿದರು.
ಉಪ ಅರಣ್ಯ ಸಂರಕ್ಷಣಾ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮಾದಕ ದ್ರವ್ಯ, ಗಾಂಜಾ, ಸಸಿ-ಗಿಡಗಳು ಬೆಳೆಯದಂತೆ ಕಟ್ಟೆಚ್ಚರ ವಹಿಸಬೇಕು. ಗಾಂಜಾ ಗಿಡಗಳು ಕಂಡು ಬಂದಲ್ಲಿ ಕೂಡಲೇ ಸಂಬಂಧಿಸಿದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಅಬಕಾರ ಇಲಾಖೆ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ಮಾರಾಟ ಮಾಡುವ-ಸಂಗ್ರಹಿಸುವವರ ಮೇಲೆ ತೀವ್ರ ನಿಗಾ ಇಡಬೇಕು. ಈ ಕುರಿತು ಮಾಹಿತಿ ದೊರೆಯಲ್ಲಿ ಸಂಬಂಧಿಸಿದ ಪೊಲೀಸ್ ಠಾಣೆಗೆ ಮಾಹಿತಿ ಒದಗಿಸಬೇಕು. ಔಷಧ ನಿಯಂತ್ರಕ ಇಲಾಖೆ ಮಾದಕ ಅಂಶಗಳುಳ್ಳ ಔಷಧವನ್ನು ಮಳಿಗೆಗಳಲ್ಲಿ ಕಡ್ಡಾಯವಾಗಿ ಅನುಮತಿ ಪಡೆದು ಮಾರಾಟಕ್ಕೆ ಅವಕಾಶ ಒದಗಿಸಬೇಕು. ಈ ಕುರಿತು ತೀವ್ರ ನಿಗಾ ಇಡುವಂತೆ ಅವರು ಸೂಚನೆ ನೀಡಿದರು.
ಪೊಲೀಸ್ ಇಲಾಖೆಯಿಂದ ಜಿಲ್ಲೆಯ ಕೆಲವು ಭಾಗಗಳಲ್ಲಿ ಪದೇ ಪದೇ ಮಾದಕ ವಸ್ತುಗಳ ಕುರಿತು ವರದಿಯಾದ ಪ್ರದೇಶಗಳ ಮೇಲೆ ತೀವ್ರ ಗಮನ ಹರಿಸಬೇಕು. ಶಾಲಾ ಆವರಣದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಿದ್ದು, ಮಾರಾಟ ಮಾಡುವವರ ಮೇಲೆ ತೀವ್ರ ನಿಗಾವಹಿಸಬೇಕು. ವಿವಿಧ ವಸತಿ ನಿಲಯಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆಯಾಗದಂತೆ ನೋಡಿಕೊಳ್ಳಬೇಕು. ವಸತಿ ನಿಲಯಗಳಲ್ಲಿ ಅನಧಿಕೃತ ವ್ಯಕ್ತಿಗಳು ಇರುವುದು ಕಂಡು ಬಂದಲ್ಲಿ ಸಂಬಂಧಿಸಿದ ನಿಲಯಪಾಲಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ವಹಿಸಲಾಗುವುದು. ಈ ಕುರಿತು ವಸತಿ ನಿಲಯಗಳಲ್ಲಿ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಎಸ್‌ಪಿ ಋಷಿಕೇಶ ಸೋನಾವಣೆ ಮಾತನಾಡಿ, ಮಾದಕ ದ್ರವ್ಯ ನಿರ್ಮೂಲನೆಗಾಗಿ ಪೊಲೀಸ್ ಇಲಾಖೆ ಸನ್ನದ್ಧವಾಗಿದ್ದು, ಜಿಲ್ಲೆಯಾದ್ಯಂತ ಕಳೆದ 3 ವರ್ಷಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ. 238 ಕೆಜಿ 45 ಗ್ರಾಂ ಮಾದಕ ದ್ರವ್ಯಗಳನ್ನು ನಾಶಪಡಿಸಲಾಗಿದೆ ಎಂದು ಅವರು ಹೇಳಿದರು.
ಎಡಿಸಿ ಸೋಮಲಿಂಗ ಗೆಣ್ಣೂರ, ಎಎಸ್‌ಪಿ ಶಂಕರ ಮಾರಿಹಾಳ, ಅಬಕಾರಿ ಇಲಾಖೆಯ ಉಪ ಆಯುಕ್ತ ಸಂಗನಗೌಡ, ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಬಸವರಾಜ ಹುಬ್ಬಳ್ಳಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಚ್. ನಾಗೂರ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ರಾಜು ಮುಜುಮದಾರ, ಪಿಆರ್‌ಇಡಿ ಇಇ ಎನ್.ಎಂ. ಗಬಸಾವಳಗಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಆನಂದ ಪಾರ್ಥನಳ್ಳಿ, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಈರಣ್ಣ ಆಶಾಪುರ ಮತ್ತಿತರರಿದ್ದರು.