ಮಡಿಕೇರಿ: ತಂಬಾಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ, ಸಂಸ್ಥೆಗಳಲ್ಲಿ ನಾಮಫಲಕಗಳನ್ನು ಅಳವಡಿಸುವುದರೊಂದಿಗೆ ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಅಧಿಕಾರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಕಾರ್ಯಕ್ರಮದ ಅಧಿಕಾರಿ ಡಾ.ಎಂ.ಶೀವಕುಮಾರ್ ಮಾತನಾಡಿ, ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಸಂಬಂಧ ನಾಮಫಲಕ ಅಳವಡಿಸುವುದು ಸಂಬಂಧಿಸಿದಂತೆ ವಿವಿಧ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಕೋಟ್ಪಾ ಉನ್ನತ ಅನುಷ್ಠಾನ ಸಂಬಂಧಿಸಿದಂತೆ ಸೋಮವಾರಪೇಟೆ ತಾಲೂಕಿನಲ್ಲಿ ಸುಮಾರು ೨೬ ಕಡೆಗಳಲ್ಲಿ ತಪಾಸಣೆ ಮಾಡಲಾಗಿದೆ. ಚಿತ್ರ ಪ್ರದರ್ಶನ, ಕಲಾಸ್ಪರ್ಧೆ ಏರ್ಪಡಿಸಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಪೊಲೀಸ್ ಇನ್ಸ್‌ಪೆಕ್ಟರ್ ಜಯರಾಮ್ ಮಾತನಾಡಿ, ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯಡಿ ೭೪೬ ಪ್ರಕರಣಗಳನ್ನು ದಾಖಲಿಸಲಾಗಿದೆ. ಸುಮಾರು ರೂ. ೬೫ ಸಾವಿರ ದಂಡ ವಸೂಲಿ ಮಾಡಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಕಾರ್ಯಕ್ರಮ ಅಧಿಕಾರಿಗಳಾದ ಗೋಪಿನಾಥ್, ಡಾ.ಆನಂದ್, ಡಾ.ರಾಮಚಂದ್ರ ಕಾಮತ್ ಇತರರಿದ್ದರು.