ಮಸ್ಕಿ: ಕನ್ನಡ ರಾಜ್ಯೋತ್ಸವವನ್ನು ಸಡಗರ-ಸಂಭ್ರಮದಿಂದ ಆಚರಿಸುವ ಕುರಿತು ತಹಸಿಲ್ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ತಹಸೀಲ್ದಾರ್ ಡಾ.ಮಲ್ಲಪ್ಪ ಯರಗೋಳ ಮಾತನಾಡಿ, ರಾಜ್ಯೋತ್ಸವವನ್ನು ಎಲ್ಲರೂ ಸೇರಿ ಅದ್ದೂರಿಯಾಗಿ ಆಚರಿಸೋಣ. ಎಲ್ಲ ಕನ್ನಡ ಪರ ಸಂಘಟನೆಗಳು ಹಾಗೂ ಇಲಾಖೆ ಅಧಿಕಾರಿಗಳು ಕೈಜೋಡಿಸಬೇಕು.
ನ. 1ರಂದು ತಾಲೂಕಿನ ಶಾಲೆ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ, 9 ಗಂಟೆಗೆ ಕೇಂದ್ರ ಶಾಲಾ ಆವರಣದಲ್ಲಿ ಧ್ವಜಾರೋಹಣ ನಂತರ ನಗರದ ಕೇಂದ್ರ ಶಾಲೆಯ ಆವರಣದಿಂದ ಭುವನೇಶ್ವರಿಯ ಭಾವಚಿತ್ರದೊಂದಿಗೆ ಶ್ರೀ ಬ್ರಮರಾಂಬ ಕಲ್ಯಾಣ ಮಂಟಪದವರೆಗೆ ಮೆರವಣಿಗೆ ನಡೆಯಲಿದೆ.
ಅಂದು ನಗರದ ಎಲ್ಲ ವೃತ್ತಗಳಲ್ಲಿ ವಿದ್ಯುತ್ ದೀಪಗಳ ಅಲಂಕಾರ ಮಾಡಲಾಗುವುದು. ಶಾಲಾ- ಕಾಲೇಜುಗಳಲ್ಲಿ ಮಕ್ಕಳಿಗೆ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುತ್ತದೆ ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಭಾಗವಹಿಸಲಿವೆ ಎಂದರು.