ಯೋಗಥಾನ್ ಆಯೋಜನೆ ಸಂಬಂಧ ಎಡಿಸಿ ಟಿ. ಜವರೇಗೌಡ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಟಿ.ಜಿ. ರಮೇಶ್‌ಬಾಬು, ಜಿಲ್ಲಾ ಕೌಶಲಾಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕಿ ಸಿ.ಎನ್.ಲತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ ಮತ್ತಿತರರು ಇದ್ದರು. 
ಜಿಲ್ಲೆ

ಆ.28ರಂದು ಯೋಗಥಾನ್: ಅಪರ ಜಿಲ್ಲಾಧಿಕಾರಿ ಜವರೇಗೌಡ ಮಾಹಿತಿ

Ramanagara


ರಾಮನಗರ: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಜನಸಾಮಾನ್ಯರಲ್ಲಿ ಯೋಗದ ಮಹತ್ವ ಹಾಗೂ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಆ.28ರಂದು ರಾಮನಗರ ಜಿಲ್ಲೆಯಲ್ಲಿ ಯೋಗಥಾನ್ ಕಾರ್ಯಕ್ರಮ ಆಯೋಜನೆಗೆ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯೋಗಥಾನ್ ಆಯೋಜಿಸುವ ಕುರಿತು ಮಂಗಳವಾರ ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗಥಾನ್ ಕಾರ್ಯಕ್ರಮ ನಡೆಯಲಿದ್ದು 15 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲು ಕ್ರಮ ವಹಿಸಬೇಕು. ಕಾರ್ಯಕ್ರಮದ ವೇದಿಕೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ, ಕುಡಿಯುವ ನೀರು, ಉಪಹಾರ, ಸ್ವಚ್ಛತೆ, ಭದ್ರತೆ, ಆಂಬುಲೆನ್ಸ್ ವ್ಯವಸ್ಥೆ ಮತ್ತು ಮೂಲಸೌಕರ್ಯ ಒದಗಿಸಲು, ಸಂಬಂಧಪಟ್ಟ ಇಲಾಖೆಗಳಿಗೆ ಜವಾಬ್ದಾರಿಯನ್ನು ಹಂಚಿಕೆ ಮಾಡಿ ಯೋಗಥಾನ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲು ಅಧಿಕಾರಿಗಳಿಗೆ ತಿಳಿಸಿದರು.

ಯೋಗವನ್ನು ಜೀವನದ ಅವಿಭಾಜ್ಯ ಅಂಗವಾಗಿ ಅಳವಡಿಸಿಕೊಳ್ಳುವುದರ ಮೂಲಕ ರೋಗಮುಕ್ತ ರಾಷ್ಟ್ರ ನಿರ್ಮಾಣದ ಸಂಕಲ್ಪದ ಮುಖ್ಯ ಉದ್ದೇಶದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸುಮಾರು 15 ಸಾವಿರ ಜನರು ಏಕಕಾಲದಲ್ಲಿ ಯೋಗಾಭ್ಯಾಸ ಮಾಡುವ ಮೂಲಕ ಲಿಮ್ಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮತ್ತು ವಿಶ್ವದಾಖಲೆ ಮಾಡಲು ಸರ್ಕಾರ ಉದ್ದೇಶಿಸಿದ್ದು, ಅದರ ಭಾಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಆಯುಷ್ ಇಲಾಖೆ, ನೆಹರು ಯುವ ಕೇಂದ್ರ, ಎನ್‌ಎಸ್‌ಎಸ್ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಯೋಗಥಾನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಯುವಜನತೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವ್ಯವಸ್ಥೆ ಮಾಡಬೇಕು ಎಂದರು.

ಯುವಕ, ಯುವತಿಯರು, ಯೋಗಪಟುಗಳು, ಕಾಲೇಜು ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಜಿಲ್ಲೆಯ ಯೋಗ ಸಂಸ್ಥೆಗಳು ಭಾಗವಹಿಸಲು ಅನುಕೂಲವಾಗುವಂತೆ ಸ್ವಯಂ ಸೇವಾ ಸಂಘಟನೆಗಳ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಕಾರ ಪಡೆದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜವರೇಗೌಡ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಟಿ.ಜಿ. ರಮೇಶ್‌ಬಾಬು, ಜಿಲ್ಲಾ ಕೌಶಲಾಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕಿ ಸಿ.ಎನ್. ಲತಾ, ಅಧಿಕಾರಿಗಳಾ ಎ.ಎಸ್ ಮಮತಾ, ಶ್ರೀವಾಣಿ ಮತ್ತಿತರರು ಹಾಜರಿದ್ದರು.

ನೋಂದಣಿಗೆ ಆನ್‌ಲೈನ್ ವ್ಯವಸ್ಥೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ ಮಾತನಾಡಿ, ಯೋಗಥಾನ್ ಕಾರ್ಯಕ್ರಮದ ಪೂರ್ವ ಸಿದ್ಧತೆಯ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರತಿದಿನ ಬೆಳಿಗ್ಗೆ ಈಗಾಗಲೇ ಉಚಿತವಾಗಿ ಯೋಗ ತರಬೇತಿ ನೀಡಲಾಗುತ್ತಿದೆ ಎಂದರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಯೋಗಾಥಾನ್ ಕಾರ್ಯಕ್ರಮದಲ್ಲಿ ನೋಂದಣಿ ಮಾಡಿಸಿಕೊಳ್ಳಲು ಆನ್‌ಲೈನ್ ವ್ಯವಸ್ಥೆ ಮಾಡಲಾಗಿದ್ದು ಕುಶಲ ಕೋಶ ತಂತ್ರಾಂಶದ ಮೂಲಕ ನೋಂದಾಯಿಸಿಕೊಳ್ಳಬಹುದು ಎಂದು ಸಭೆಗೆ ಮಾಹಿತಿ ನೀಡಿದರು.