ಅರಸೀಕೆರೆ ತಾಲೂಕು ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಕೆ.ಎಂ.ಶಿವಲಿಂಗೇಗೌಡ ಉದ್ಘಾಟಿಸಿದರು. ಸಂತೋಷ್ ಕುಮಾರ್, ಧರ್ಮಶೇಖರ್, ಕುಮಾರ್, ಜಯಣ್ಣ ಇತರರಿದ್ದರು. 
ಜಿಲ್ಲೆ

ರಾಮಾಯಣ ಎಲ್ಲರ ಬದುಕಿಗೆ ಆದರ್ಶ ಗ್ರಂಥ

ಅರಸೀಕೆರೆ: ಮಹರ್ಷಿ ವಾಲ್ಮೀಕಿ ರಚಿಸಿರುವ ಮಹಾಕಾವ್ಯ ರಾಮಾಯಣ ಜನಜೀವನದ ಮೇಲೆ ಗಾಢವಾದ ಪರಿಣಾಮ ಬೀರಿದೆ ಎಂದು ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.

ನಗರದ ತಾಲೂಕು ಕಚೇರಿ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಉದ್ಘಾಟಿಸಿ ಮಾತನಾಡಿದರು. ಅಧರ್ಮ ಅಳಿಸಲು ಮಹಾಪುರುಷರು ಅವತರಿಸಿ ಬರುತ್ತಾರೆ ಎನ್ನುವುದು ಶತಮಾನಗಳಿಂದಲೂ ಸಾಬೀತಾಗಿದೆ. ಏಕ ಪತ್ನಿ ವ್ರತಸ್ಥ ಶ್ರೀರಾಮ ಆದರ್ಶವಾಗಬೇಕು. ವಾಲ್ಮೀಕಿ ರಚಿತ ರಾಮಾಯಣ ಮಹಾಕಾವ್ಯ ಎಲ್ಲರ ಬದುಕಿಗೆ ಆದರ್ಶ ಗ್ರಂಥವಾಗಿದ್ದು, ಮುಂದಿನ ಪೀಳಿಗೆಗೆ ಪರಿಚಯಿಸುವ ಆಗತ್ಯವಿದೆ ಎಂದರು.

ತಹಸೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್ ಮಾತನಾಡಿದರು. ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಜಯಣ್ಣ, ಟಿಎಪಿಸಿಎಂಎಸ್ ಅಧ್ಯಕ್ಷ ಕೆಲ್ಲೆಂಗೆರೆ ಕುಮಾರ್, ಮುಖಂಡರಾದ ಹನುಮಪ್ಪ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ನಾಗರಿಕರು ಪಾಲ್ಗೊಂಡಿದ್ದರು. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.