ಮಂಗಳೂರು : ಅಪ್ರಾಪ್ತ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿ, ಆಕೆಯ ಖಾಸಗಿ ಚಿತ್ರಗಳನ್ನು ದುರುಪಯೋಗಪಡಿಸಿಕೊಂಡು ಜೀವ ಬೆದರಿಕೆ ಹಾಕಿದ ಪ್ರಕರಣ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ವಿವಿಧ ಕಾಯ್ದೆಗಳಡಿ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಕುಂಜತ್ತಬೈಲ್, ದೇವಿನಗರ ನಿವಾಸಿ ಸೋನು ಮ್ಯಾಕ್ಲಿನ್ ನೊರೊನ್ಹ (20) ಶಿಕ್ಷೆಗೊಳಗಾದ ಅಪರಾಧಿ.
* ಪ್ರಕರಣ ಹಿನ್ನೆಲೆ: 2024ರ ಫೆಬ್ರವರಿ ತಿಂಗಳಿನಿಂದ ಅಪ್ರಾಪ್ತ ಬಾಲಕಿಯೊಂದಿಗೆ ಪ್ರೀತಿಯ ನೆಪದಲ್ಲಿ ಪರಿಚಯ ಬೆಳೆಸಿ, ಆಕೆಯನ್ನು ನಂಬಿಸಿ ಶಕ್ತಿನಗರ ಹಾಗೂ ಅಳಪೆ ಗ್ರಾಮದ ವಿವಿಧ ಮನೆಗಳಲ್ಲಿ 2024ರ ಸೆಪ್ಟೆಂಬರ್‌ನಿಂದ 2025ರ ಜೂನ್ ಅವಧಿಯಲ್ಲಿ ಹಲವು ಬಾರಿ ಅತ್ಯಾಚಾರ ಎಸಗಿದ್ದನು. ಅಲ್ಲದೆ ಬಾಲಕಿ ಸ್ನಾನ ಮಾಡುತ್ತಿದ್ದ ವೇಳೆ ವೀಡಿಯೊ ಕರೆ ಮೂಲಕ ಆಕೆಯ ಖಾಸಗಿ ದೃಶ್ಯಗಳ ಸ್ಕ್ರೀನ್‌ಶಾಟ್‌ಗಳನ್ನು ತನ್ನ ಮೊಬೈಲ್‌ನಲ್ಲಿ ಸಂಗ್ರಹಿಸಿಕೊಂಡಿದ್ದನು. ದೈಹಿಕ ಸಂಪರ್ಕಕ್ಕೆ ನಿರಾಕರಿಸಿದರೆ ಆ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಹಾಗೂ ಬಾಲಕಿ, ಆಕೆಯ ತಾಯಿ ಮತ್ತು ಅಕ್ಕನನ್ನು ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದನು ಎಂದು ಆರೋಪಿಸಲಾಗಿತ್ತು.
ಕಂಕನಾಡಿ ನಗರ ಪೊಲೀಸ್ ಠಾಣೆಯ ಆಗಿನ ಪೊಲೀಸ್ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಪ್ರಕರಣದ ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾ ದೇವಿ ವಾದ ಮಂಡಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಊಖಇ2)ದ ನ್ಯಾಯಾಧೀಶ ಮಾನು ಕೆ.ಎಸ್. ಅವರು, ಪೋಕ್ಸೋ ಕಾಯ್ದೆಯ ಕಲಂ 6 ಹಾಗೂ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ 64(2)(ಎಂ) ಅಡಿಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದ್ದಾರೆ. ಅಲ್ಲದೆ, ಬಿಎನ್‌ಎಸ್ ಕಲಂ 77, ಪೋಕ್ಸೋ ಕಾಯ್ದೆಯ ಕಲಂ 15 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಕಲಂ 66(ಇ) ಅಡಿಯಲ್ಲಿ ತಲಾ ಒಂದು ವರ್ಷದ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂ.ದಂಡ ವಿಧಿಸಿ ಆದೇಶಿಸಿದ್ದಾರೆ.