ಕೊಪ್ಪಳ: ಜಿಲ್ಲೆಯಲ್ಲಿ ಸೆ.9ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ ಎಂದು ಜಿಲ್ಲಾ ನ್ಯಾಯಾಧೀಶ ಬನ್ನಿಕಟ್ಟಿ ಹನುಮಂತಪ್ಪ ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯ ಕಚೇರಿಯಲ್ಲಿ ಬುಧವಾರ ಮಾಹಿತಿ ನೀಡಿದ ಅವರು, ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಲು ಸಾರ್ವಜನಿಕರಿಗೆ ಇದೊಂದು ಉತ್ತಮ ಅವಕಾಶ.
ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಉದ್ಯೋಗ ಮರು ಸ್ಥಾಪಿಸುವ ಪ್ರಕರಣ, ವಿದ್ಯುತ್, ನೀರಿನ ಶುಲ್ಕ, ರಾಜಿ ಆಗಬಹುದಾದ ಅಪರಾಧ ಪ್ರಕರಣ, ವೈವಾಹಿಕ, ಸಿವಿಲ್, ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಿಸಿದ, ಗ್ರಾಹಕರ ವೇದಿಕೆಯಲ್ಲಿನ ಪ್ರಕರಣ, ಸಾಲ ವಸೂಲಾತಿ ಸೇರಿ ಇತರ ರಾಜಿ ಆಗಬಹುದಾದ ಪ್ರಕರಣಗಳನ್ನು ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು ಎಂದರು.
ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯ ಉಳಿದು ವಿವಾದ ಮುಕ್ತಾಯವಾಗಲಿದೆ. ವ್ಯಾಜ್ಯಪೂರ್ವ ಪ್ರಕರಣಗಳನ್ನು ಪರಿಹರಿಸಿಕೊಳ್ಳಲು ಅವಕಾಶವಿದೆ. ರಾಜಿ ಸಂಧಾನ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಿದ ಶುಲ್ಕ ಮರುಪಾವತಿ ಮಾಡಲಾಗುವುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಲೋಕ್ ಅದಾಲತ್ ಒಂದು ವಿಶೇಷ ಅವಕಾಶ ಎಂದು ತಿಳಿಸಿದರು.
ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಪ್ಪಳ ಟೋಲ್ ಫ್ರಿ ಸಂಖ್ಯೆ: 08539-220233ಗೆ ಸಂಪರ್ಕಿಸುವಂತೆ ಮಾಹಿತಿ ನೀಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ದೇವೇಂದ್ರ ಪಂಡಿತ್ ಇದ್ದರು.