ಮಂಡ್ಯ:ರಾಜ್ಯಾದ್ಯಂತ ಸೆ.9ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಾಣಿ ಎ.ಶೆಟ್ಟಿ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿಯೂ ಲೋಕ ಅದಾಲತ್ ಮುಖಾಂತರ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಪೂರ್ವಭಾವಿ ಬೈಠಕ್‌ಗಳನ್ನು ನಡೆಸಲಾಗುತ್ತಿದ್ದು, ಆಸ್ತಿ ವಿವಾದಗಳನ್ನು ಒಳಗೊಂಡಂತೆ ಸಿವಿಲ್ ವ್ಯಾಜ್ಯ, ಮೋಟಾರು ವಾಹನಗಳ ಪ್ರಕರಣ, ಎಂಎಂಆರ್‌ಡಿ ಪ್ರಕರಣ, ರಾಜಿ ಆಗಬಹುದಾದಂತಹ ಕ್ರಿಮಿನಲ್ ಮತ್ತು ಚೆಕ್ ಬೌನ್ಸ್ ಪ್ರಕರಣಗಳನ್ನು ರಾಜಿಗೆ ತೆಗೆದುಕೊಂಡು ಆಯಾಯ ನ್ಯಾಯಾಲಯಗಳಲ್ಲಿ ಇತ್ಯರ್ಥಗೊಳಿಸುವ ಪ್ರಯತ್ನ ಮಾಡಲಾಗಿದೆ ಎಂದಿದ್ದಾರೆ.
ಲೋಕ ಅದಾಲತ್‌ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಜತೆಗೆ ನ್ಯಾಯಾಲಯಕ್ಕೆ ದಾಖಲಾಗುವ ಮುನ್ನ ಅಂದರೆ, ವ್ಯಾಜ್ಯಪೂರ್ವ ಪ್ರಕರಣಗಳು(ಬ್ಯಾಂಕ್ ವಸೂಲಾತಿ ಪ್ರಕರಣ, ವಿದ್ಯುತ್ ಹಾಗೂ ನೀರಿನ ಶುಲ್ಕ, ಕಾರ್ಮಿಕ ವಿವಾದ ಪ್ರಕರಣ) ಇಂತಹ ಪ್ರಕರಣಗಳಿಗೆ ಉಭಯ ಪಕ್ಷಗಾರರಿಗೆ ನೊಟೀಸ್ ನೀಡಿ ಪ್ರಾಧಿಕಾರದ ವತಿಯಿಂದ ಪೂರ್ವಭಾವಿ ಬೈಠಕ್ ನಡೆಸಿ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಇಂತಹ ಪ್ರಕರಣಗಳಿಗೆ ನ್ಯಾಯಾಲಯಕ್ಕೆ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ವಕೀಲರ ಮುಖಾಂತರ ಅಥವಾ ಖುದ್ದಾಗಿ ಪ್ರಾಧಿಕಾರಕ್ಕೆ ಭೇಟಿ ನೀಡಿ ಪ್ರಕರಣವನ್ನು ರಾಜಿಮಾಡಿಕೊಳ್ಳಬಹುದಾಗಿರುತ್ತದೆ ಎಂದು ವಿವರಿಸಿದ್ದಾರೆ.
ಜು.8ರಲ್ಲಿ ನಡೆದ ಅದಾಲತ್‌ನಲ್ಲಿ 30,168 ಪ್ರಕರಣಗಳನ್ನು ನ್ಯಾಯಾಧೀಶರು, ವಕೀಲರು, ಪಕ್ಷಗಾರರು, ಅಭಿಯೋಜಕರು, ಪೋಲಿಸ್ ಇಲಾಖೆ ಸಹಯೋಗದೊಂದಿಗೆ ಇತ್ಯರ್ಥ ಪಡಿಸುವಲ್ಲಿ ಯಶಸ್ವಿಯಾಗಿದ್ದೇವೆ. ಈ ಬಾರಿಯ ಅದಾಲತ್‌ನಲ್ಲಿಯೂ ಸಹ ಇನ್ನು ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸಿ ಜನಸಾಮಾನ್ಯರಿಗೆ ಅನುಕೂಲವಾಗುವ ರೀತಿಯಲ್ಲಿ ನ್ಯಾಯದಾನ ಮಾಡಬೇಕೆಂಬ ಉದ್ದೇಶವಿದೆ. ಆದ್ದರಿಂದ ಜನ ಸಾಮಾನ್ಯರು ಇದರ ಸದುಪಯೋಗವನ್ನು ಪಡೆದುಕೊಂಡು ಅದಾಲತ್ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.