ವಿಜಯಪುರ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಸಭಾಭವನದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವಾಜಿ ಅನಂತ ನಲವಡೆ ಸುದ್ದಿಗೋಷ್ಠಿ ನಡೆಸಿದರು. ನ್ಯಾಯಾಧೀಶ ಮಲ್ಲಿಕಾರ್ಜುನ ಅಂಬಲಿ, ಸಿ. ಮಹೇಶ ಚಂದ್ರಕಾಂತ ಇದ್ದಾರೆ.  
ಜಿಲ್ಲೆ

13ರಂದು ರಾಷ್ಟ್ರೀಯ ಲೋಕ ಅದಾಲತ್​

ಗಿರೀಶ ಸಗರ

ವಿಜಯಪುರ: ರಾಜಿ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥಕ್ಕಾಗಿ ಜು. 13 ರಂದು ರಾಷ್ಟ್ರೀಯ ಲೋಕ ಅದಾಲತ್​ ಹಮ್ಮಿಕೊಳ್ಳಲಾಗಿದ್ದು, ಈ ಅವಕಾಶ ಸದ್ಭಳಕೆ ಮಾಡಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವಾಜಿ ಅನಂತ ನಲವಡೆ ತಿಳಿಸಿದರು.
ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಅದಾಲತ್​ ನಡೆಯಲಿದೆ. ಎಲ್ಲ ವರ್ಗದ ಕದಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ಅದಾಲತ್​ ಆಯೋಜಿಸಲಾಗುತ್ತಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

ಪ್ರಕರಣಗಳ ವಿವರ

ಲೋಕ ಅದಾಲತ್​ ಕಾರ್ಯಕ್ರಮದಲ್ಲಿ ರಾಜಿಗೆ ಒಳಪಡಬಹುದಾದ ವ್ಯಾಜ್ಯ ಪೂರ್ವ ಪ್ರಕರಣಗಳು, ಚೆಕ್​ ಅಮಾನ್ಯದ ಪ್ರಕರಣಗಳು, ಬ್ಯಾಂಕ್​ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಮರು ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್​ ಹಾಗೂ ನೀರಿನ ಶುಲ್ಕಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು, ಕರ್ನಾಟಕ ರಿಯಲ್​ ಎಸ್ಟೇಟ್​ ಪ್ರಾಧಿಕಾರಕ್ಕೆ ಸಂಬಂಧಪಟ್ಟ (ರೇರಾ) ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧಿಕರಣದ ಪ್ರಕರಣಗಳು(ಡಿಆರ್​ಟಿ), ಕರ್ನಾಟಕ ವಿದ್ಯುತ್​ ನಿಯಂತ್ರಣ ಆಯೋಗ, ಕಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ಭೂಸ್ವಾಧಿನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್​ ಮತ್ತು ಇತರೆ ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್​ನಲ್ಲಿ ಇತ್ಯರ್ಥಪಡಿಸಿ ಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.
ಸೂಕ್ತ ಮಾರ್ಗದರ್ಶನ: ಕದಾರರು ತಮ್ಮ ಪ್ರಕರಣಗಳನ್ನು ಲೋಕ ಅದಾಲತ್​ ಮೂಲಕ ಪ್ರಕರಣ, ವ್ಯಾಜ್ಯಗಳನ್ನು ಇತ್ಯರ್ಥಗೊಳಿಸಿ ಜನರಿಗೆ ತ್ವರಿತವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ನ್ಯಾಯ ದೊರಕಿಸಲಾಗುವುದು. ನ್ಯಾಯಾಲಯಗಳಲ್ಲಿ ಉಭಯ ಪಕ್ಷದವರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು ಎಂದರು. ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ 2024 ಜು. 1ಕ್ಕೆ ಒಟ್ಟು 66,736 ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದು, ಇವುಗಳಲ್ಲಿ ಈಗಾಗಲೇ 16,393 ಪ್ರಕರಣಗಳನ್ನು ಇತ್ಯರ್ಥಕ್ಕಾಗಿ ಗುರುತಿಸಲಾಗಿದೆ. ಹೆಚ್ಚಿನ ಪ್ರಕರಣಗಳನ್ನು ರಾಜಿಗೆ ಸಂಬಂಧಿಸಿದ ವಕೀಲರ ಹಾಗೂ ಕದಾರರೊಂದಿಗೆ ಚರ್ಚಿಸಿ, ರಾಜಿಗಾಗಿ ಗುರುತಿಸಲು ಪ್ರಯತ್ನಿಸಲಾಗುತ್ತಿದೆ. ಇನ್ನೂ ಹೆಚ್ಚಿನ ಪ್ರಕರಣಗಳು ರಾಷ್ಟ್ರೀಯ ಲೋಕ ಅದಾಲತ್​ನಲ್ಲಿ ರಾಜಿ ಮೂಲಕ ಇತ್ಯರ್ಥಗೊಳ್ಳುವ ನಿರೀೆ ಇದೆ ಎಂದು ಹೇಳಿದರು. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಅಪೌಷ್ಟಿಕ ನಿವಾರಣಾ ರಾಜ್ಯ ಸಲಹಾ ಸಮಿತಿಯಿಂದ ಉಚ್ಚ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕಾದ ಪ್ರಾಧಿಕಾರಕ್ಕೆ ನಿರ್ದೇಶನದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ಅಂಗನವಾಡಿ ಕೇಂದ್ರಗಳಿಗೆ ಒದಗಿಸಿರುವ ಮೂಲ ಸೌಲಭ್ಯ, ಅವುಗಳ ಸ್ಥಿತಿಗತಿ ಕುರಿತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂದು ಅವರು ಹೇಳಿದರು.


ವಿಶೇಷ ಲೋಕ ಅದಾಲತ್​

ಸವೋರ್ಚ್ಚ ನ್ಯಾಯಾಲಯದ 75ನೇ ಸ್ಥಾಪನಾ ದಿನಾಚರಣೆ ಅಂಗವಾಗಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಜು.29ರಿಂದ ಆ. 3ರವರೆಗೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ವಿಶೇಷ ಲೋಕ ಅದಾಲತ್​ ಹಮ್ಮಿಕೊಳ್ಳಲಾಗಿದೆ.
ಸವೋರ್ಚ್ಚ ನ್ಯಾಯಾಲಯದಲ್ಲಿ ಜಿಲ್ಲೆಯ 26 ಪ್ರಕರಣಗಳು ಬಾಕಿ ಇದ್ದು, ಈಗಾಗಲೇ ಸದರಿ ಪ್ರಕರಣಗಳನ್ನು ಪ್ರತಿ ದಿನ ಜಿಲ್ಲಾ ನ್ಯಾಯಾಲಯದಲ್ಲಿ ವಿಡಿಯೋ ಕಾನ್ಫರೆನ್ಸ್​ ಹಾಲ್​ನಲ್ಲಿ ಪೂರ್ವ ಸಂಧಾನ ಮಾಡಲಾಗುತ್ತಿದ್ದು, ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಲ್ಲಿರುವ ಪಕ್ಷಗಾರರು ಖುದ್ದಾಗಿ ಅಥವಾ ವಕೀಲರೊಂದಿಗೆ ಅಥವಾ ವಿಡಿಯೋ ಕಾನ್ಫರೆನ್ಸ್​ ಮೂಲಕ ಹಾಜರಾಗಿ ಪೂರ್ವ ಸಂಧಾನ ಮಾಡಿಕೊಳ್ಳುವಂತೆ ಅವರು ತಿಳಿಸಿದರು.
ಹಿರಿಯ ಸಿವಿಲ್​ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಅಂಬಲಿ, ಹಿರಿಯ ಸಿವಿಲ್​ ನ್ಯಾಯಾಧೀಶ ಸಿ. ಮಹೇಶ ಚಂದ್ರಕಾಂತ ಇದ್ದರು.