ಬೆಳಗಾವಿ: ರಾಜ್ಯ ಸರ್ಕಾರವು ಈ ಬಾರಿ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ 1.50 ಕೋಟಿ ರೂ. ಅನುದಾನ ನೀಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ.ಕೆ.ಧರಣಿದೇವಿ ಮಾಲಗತ್ತಿ ತಿಳಿಸಿದರು.
ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಜ.17 ಹಾಗೂ 18 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಸರ್ಕಾರವು ಸಂಗೊಳ್ಳಿ ಉತ್ಸವಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ 1.50 ಕೋಟಿ ರೂ. ಅನುದಾನ ನೀಡಿದ್ದು, ಅರ್ಥಪೂರ್ಣ ಹಾಗೂ ಅದ್ದೂರಿ ಉತ್ಸವ ಆಚರಿಸಲಾಗುವುದು ಎಂದರು. ಉತ್ಸವದ ಸಂದರ್ಭದಲ್ಲಿ ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿ (ಶಿಲ್ಪವನ)ಯನ್ನು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ದೇಶಪ್ರೇಮ, ಜೀವನಚರಿತ್ರೆ ಹಾಗೂ ಶೌರ್ಯ ಬಿಂಬಿಸುವ ಮಾಹಿತಿಯನ್ನು ಈ ವನದಲ್ಲಿ ಅಚ್ಚುಕಟ್ಟಾಗಿ ಪ್ರದರ್ಶಿಸಲಾಗಿದೆ. ಅದು ಯುವ ಸಮುದಾಯಕ್ಕೆ ಸ್ಫೂರ್ತಿಯಾಗಲಿದೆ ಎಂದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ಎಚ್.ಚನ್ನೂರ, ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಇತರರಿದ್ದರು.