ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಇನ್ನು ಮುಂದೆ ಪಿಂಚಣಿಗೆ ಅರ್ಜಿ ಹಾಕಿ ಅಲೆದಾಡುವಂತಿಲ್ಲ. ಉಡುಪಿ, ಬಳ್ಳಾರಿ ಮಾದರಿಯಲ್ಲಿ ತಹಸೀಲ್ದಾರ್ ಮೂಲಕ ಪಿಂಚಣಿದಾರರಿಗೆ ನೇರವಾಗಿ ಬಾಂಡ್‌ಗಳು ಮನೆಗೆ ತಲುಪುವ ವ್ಯವಸ್ಥೆ ಮಾಡಲಾಗುವುದು ಎಂದು ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ತಿಳಿಸಿದರು.
ದೇವನಹಳ್ಳಿ ತಾಲೂಕು ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಪಂ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಪಿಂಚಣಿಗಾಗಿ ಅಲೆದಾಡುವ ಪರಿಸ್ಥಿತಿ ಬಗ್ಗೆ ಸಾಕಷ್ಟು ದೂರು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮಹತ್ವದ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಕೆರೆಯಂಗಳದ ಜಾಲಿ ಮರಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ ಸಚಿವರು, ಜಿಲ್ಲೆಯಲ್ಲಿ ನೀಲಗಿರಿ ಮರಗಳಿಂದಾಗಿ ಅಂತರ್ಜಲ ಸಮಸ್ಯೆ ಹೆಚ್ಚಾಗುತ್ತಿದೆ. ಗ್ರಾಪಂ ಹಾಗೂ ತಾಪಂಗಳಿಂದ ನೀಲಗಿರಿ ತೆರವಿಗೆ ಪ್ರಸ್ತಾವನೆಗಳು ಬಂದಲ್ಲಿ ಕೂಡಲೇ ಕ್ರಮಕ್ಕೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ರಾಗಿ ಹಾನಿ ಆತಂಕ: ಜಿಲ್ಲೆಯ ಮಳೆ-ಬೆಳೆ ಕುರಿತು ಕೃಷಿ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಕೇಳಲಾಯಿತು. ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಶೇ.98ರಾಗಿ ಬಿತ್ತನೆಯಾಗಿದೆ. ಆದರೆ ಸೈಕ್ಲೋನ್ ಪ್ರಭಾವದಿಂದಾಗಿ ಬೆಳೆಗಳು ನೆಲಕಚ್ಚಿವೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದರು.
ಡಿಸಿ ಕೋರಿಕೆ: ಜಿಲ್ಲೆಯಲ್ಲಿ ನದಿಮೂಲ ಇಲ್ಲದಿರುವುದರಿಂದ ಸ್ವಂತ ಖರ್ಚಿನಲ್ಲಿ ಕೊಳವೆಬಾವಿ ಕೊರೆಸಿ, ಪೈಪ್ ಲೈನ್‌ಗೆ ಅನುದಾನ ಒದಗಿಸುವಂತೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸಚಿವರಲ್ಲಿ ಮನವಿ ಮಾಡಿದರು.
ಬಾಲ್ಯ ವಿವಾಹ ತಡೆಗಟ್ಟಿ: ಲಾಕ್‌ಡೌನ್ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣ ಹೆಚ್ಚಾಗಿದ್ದು, ಮಹಿಳೆ ಮತ್ತು ಮಕ್ಕಳಿಗೆ ಅಗತ್ಯ ರಕ್ಷಣೆ ದೊರಕಿಸಿಕೊಡಬೇಕು. ಹೆಣ್ಣು ಮಕ್ಕಳ ರಕ್ಷಣೆ ಕುರಿತ ಯೋಜನೆಗಳ ಮಾಹಿತಿ ಒಳಗೊಂಡ ಕರಪತ್ರ, ಗೋಡೆಬರಹ, ಸಹಾಯವಾಣಿ-1098 ಕುರಿತು ಜಾಗೃತಿ ಮೂಡಿಸುವಂತೆ ಸಚಿವ ಆರ್.ಅಶೋಕ್ ಸೂಚಿಸಿದರು.
ಪಶು ಆಸ್ಪತ್ರೆ ನಿರ್ಮಾಣ: ಜಾನುವಾರುಗಳಿಗೆ ಚರ್ಮಗಂಟು ರೋಗದ ನಿರ್ವಹಣೆ ಕುರಿತು ಮಾಹಿತಿ ನೀಡಿದ ಪಶುಪಾಲನಾ ಇಲಾಖೆ ಅಧಿಕಾರಿಗಳು ರೋಗವನ್ನು ನಿಯಂತ್ರಣಕ್ಕೆ ತರಲಾಗಿದೆ, 26 ವಾರಗಳಿಗೆ ಸಾಕಾಗುವಷ್ಟು ಮೇವು, ನೀರಿನ ಲಭ್ಯತೆ ಇದೆ ಎಂದರು.
ಪಶು ಆಸ್ಪತ್ರೆ ನಿರ್ಮಾಣ ಹಾಗೂ ಮೊಬೈಲ್ ವೆಟರ್ನರಿ ಕ್ಲಿನಿಕ್ ತೆರೆಯಲು ಕ್ರಮ ಕೈಗೊಂಡಿರುವುದಾಗಿ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಸಭೆಯ ಗಮನ ಸೆಳೆದರು.
ಅನುದಾನ ಬಳಸಿ: ಜಿಲ್ಲೆಯಲ್ಲಿ ಆಸ್ಪತ್ರೆ, ಶಾಲೆ, ಸ್ಮಶಾನದಂತಹ ಸಾರ್ವಜನಿಕ ಉಪಯುಕ್ತ ಕಟ್ಟಡಗಳ ನಿರ್ಮಾಣದ ನಂತರ ಉಳಿದ ಜಮೀನನ್ನು ಸಾಗುವಳಿಗೆ ನೀಡಬಹುದು ಹಾಗೆಯೇ, ತಾಲೂಕುವಾರು ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ಅನುದಾನ ನೀಡುವ ಮೂಲಕ ಅಭಿವೃದ್ಧಿ ಕೆಲಸಗಳಿಗೆ ಕೈಜೋಡಿಸುವಂತೆ ಅಶೋಕ್ ಹೇಳಿದರು.
ಆಂಬುಲೆನ್ಸ್ ಹಾಗೂ ಶ್ರದ್ಧಾಂಜಲಿ ವಾಹನಗಳ ಸ್ಥಿತಿಗತಿ ಪರಿಶೀಲಿಸಬೇಕು, ಕರೊನಾ ಕುರಿತು ಜಿಲ್ಲೆಯ ಎಲ್ಲ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಗ್ರಾಮಾಂತರ ಜಿಲ್ಲೆ ರಾಜ್ಯದಲ್ಲಿಯೇ ಎರಡನೇ ಸ್ಥಾನ ಪಡೆದಿರುವುದು ಸಂತಸ ತಂದಿದೆ, ಪದವಿ ತರಗತಿಗಳು ಆರಂಭವಾಗಿದ್ದು, ಕರೊನಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ತರಗತಿ ನಡೆಸಬೇಕು ಎಂದು ತಾಕೀತು ಮಾಡಿದರು.
ಜಿಪಂ ಪ್ರಭಾರ ಅಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ಶಾಸಕ ವೆಂಕಟರಮಣಯ್ಯ, ಶಾಸಕ ಶ್ರೀನಿವಾಸ್, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ, ಎಸ್‌ಪಿ ರವಿ.ಡಿ.ಚನ್ನಣ್ಣನವರ್, ಜಿಪಂ ಸಿಇಒ ಎನ್.ಎಂ.ನಾಗರಾಜು, ಮುಖ್ಯ ಯೋಜನಾಧಿಕಾರಿ ವಿನುತಾರಾಣಿ ಮತ್ತಿತರರಿದ್ದರು.