ಜಿಲ್ಲೆ

ಕಾಂಗ್ರೆಸ್‌ಗೆ ಬಂಡಾಯದ ಬಿಸಿ: ಸ್ವತಂತ್ರ ಅಭ್ಯರ್ಥಿಯಾಗಿ ಹರಪಳ್ಳಿ ರವೀಂದ್ರ


ಮಡಿಕೇರಿ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ ಕೂಡಾ ಎದುರಾಗಿದ್ದು, ಮಡಿಕೇರಿ ಕ್ಷೇತ್ರಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದ ಉದ್ಯಮಿ ಹರಪಳ್ಳಿ ರವೀಂದ್ರ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.


ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೨೦೨೩ರ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದೆ. ಟಿಕೆಟ್ ವಿಚಾರದಲ್ಲಿ ಮುಂಚೂಣಿ ಸ್ಪರ್ಧಿಯಾಗಿದ್ದ ನನಗೆ ಟಿಕೆಟ್ ಕೈತಪ್ಪಿರುವುದರಿಂದ ವೈಯಕ್ತಿಕವಾಗಿ ನೋವಾಗಿದೆ. ಕೊಡಗಿನ ಸರ್ವತೋಮುಖ ಅಭಿವೃದ್ಧಿಗೆ ಪಣತೊಟ್ಟಿದ್ದು, ಕೊಡಗಿನ ಚಿತ್ರಣವನ್ನು ಬದಲಿಸಬೇಕೆಂದು ದೃಢಸಂಕಲ್ಪಮಾಡಲಾಗಿತ್ತು. ಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಒಕ್ಕಲಿಗರ ಸಂಘದಲ್ಲಿನ ತಮ್ಮ ಬಣಕ್ಕೆ ಸೇರಿಸಿಕೊಂಡರು. ಈಗ ಟಿಕೆಟ್ ಕೈತಪ್ಪಿದೆ ಎಂದು ಅಸಮಾಧಾನ ಹೊರಹಾಕಿದರು.


ನನಗೆ ಅಧಿಕಾರ, ಹಣದ ಆಸೆ ಇಲ್ಲ. ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದರೆ ಕೊಡಗಿಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ, ಪ್ರವಾಸೋದ್ಯಮದ ಬೆಳವಣಿಗೆಗೆ ಕ್ರಮ, ತಾಲೂಕು ಮಟ್ಟದಲ್ಲಿ ಕ್ರೀಡಾ ಶಾಲೆ, ಸೈನಿಕ ಶಾಲೆ ನಿರ್ಮಾಣ, ಯುವಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಒತ್ತು ಕೊಡಬೇಕು. ಕೈಗಾರಿಕೆಯ ಬೆಳವಣಿಗೆಗೆ ಶ್ರಮಿಸಬೇಕೆಂಬ ಆಶಾಭಾವನೆ ನನ್ನಲ್ಲಿತ್ತು ಎಂದರು.


ಯಾವುದೇ ಆಮಿಷಕ್ಕೆ ಒಳಗಾಗುವುದಿಲ್ಲ. ಪಕ್ಷದಲ್ಲಿ ಸ್ಥಾನಮಾನದ ಭರವಸೆ ಸಿಕ್ಕಲ್ಲಿ ಸ್ಪರ್ಧೆಯಿಂದ ಹಿಂದೆ ಸರಿಯುವ ಸಾಧ್ಯತೆಯೂ ಇದೆ. ಬೆಂಬಲಿಗರ ಸಭೆಯಲ್ಲಿ ಚರ್ಚಿಸಿದ ನಂತರ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು. ಏ.೧೭ಕ್ಕೆ ನಾಮಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬೆಂಬಲಿಗ ವೆಂಕಟೇಶ್ ಇದ್ದರು.