ವಿಜಯಪುರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳ ಸಭೆ ನಡೆಸಿದರು. ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಲೋಕಾಯುಕ್ತ ಡಿವೈಎಸ್‌ಪಿ ಸುರೇಶ ರೆಡ್ಡಿ ಮತ್ತಿತರರಿದ್ದಾರೆ.  
ಜಿಲ್ಲೆ

ಉಪ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ, ಯಾವಾಗ? ಎಲ್ಲಿ?

ವಿಜಯಪುರ: ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ ಆಗಮನ ಹಿನ್ನೆಲೆ ಪೂರ್ವ ಸಿದ್ಧತೆ ಸಭೆ ನಡೆಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು, ಅಹವಾಲು ಸ್ವೀಕಾರ ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶನಿವಾರ ಸಭೆ ನಡೆಸಿದ ಅವರು, ಆ.22ರಂದು ನಗರದ ಸ್ಟೇಶನ್ ರಸ್ತೆಯ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ವಿಚಾರಣೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವುದರಿಂದ ವ್ಯವಸ್ಥಿತವಾಗಿ ನಿರ್ವಹಣೆ ಮಾಡುವಂತೆ ಸೂಚಿಸಿದರು.

ಅಂದು ಬೆಳಗ್ಗೆ 10 ರಿಂದ 1.30ರವರೆಗೆ ಹಾಗೂ ಮಧ್ಯಾಹ್ನ 2.30ರಿಂದ 5 ರವರೆಗೆ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ವಿಚಾರಣೆ ನಡೆಯಲಿದೆ. ಅಹವಾಲು ಕಾರ್ಯಕ್ರಮ ವ್ಯವಸ್ಥಿತವಾಗಿ ನಿರ್ವಹಣೆಗೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸಿ ಅಹವಾಲುಗಳನ್ನು ಸಲ್ಲಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಪ್ರತ್ಯೇಕವಾಗಿ 4 ಕೌಂಟರ್ ತೆರೆಯಬೇಕು. ಕುಡಿಯುವ ನೀರಿನ ವ್ಯವಸ್ಥೆ, ವೇದಿಕೆ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ-ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರಿತ್ಯ ಆ.23ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1.30ರವರೆಗೆ ಮತ್ತು ಮಧ್ಯಾಹ್ನ 2.30ರಿಂದ 5 ರವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಚಾರಣೆ ನಡೆಸಲಿರುವುದರಿಂದ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಎಲ್ಲ ಅಗತ್ಯ ಮಾಹಿತಿಯೊಂದಿಗೆ ಹಾಜರಿರುವಂತೆ ಅವರು ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಲೋಕಾಯುಕ್ತ ಡಿವೈಎಸ್‌ಪಿ ಸುರೇಶ ರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಆನಂದ ಠಕ್ಕಣ್ಣವರ, ಆನಂದ ಡೋಣಿ, ಹೆಸ್ಕಾಂ ಅಧೀಕ್ಷಕ ಸಿದ್ಧಪ್ಪ ಬಿಂಜಗೇರಿ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಮತ್ತಿತರರಿದ್ದರು.