ಜಿಲ್ಲೆ

ಸಾಧಿಸುವ ಛಲವಿದ್ದರೆ ಯಶಸ್ಸು ಖಚಿತ

ಇಂದಿರಾ ಎನ್ ಕೆ

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

ಶಿಸ್ತು, ಸಮರ್ಪಣಾ ಮನೋಭಾವ, ದೃಢತೆ ಈ ಮೂರು ಪ್ರಧಾನವಾಗಿ ಎಲ್ಲಾ ವಿದ್ಯಾರ್ಥಿಗಳಲ್ಲಿ ಇರಬೇಕು. ಸಾಧಿಸುವ ಛಲ ಇದ್ದರೆ ಖಂಡಿತವಾಗಿಯೂ ಯಶಸ್ಸನ್ನು ಪಡೆಯಲು ಸಾಧ್ಯ ಎಂದು ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎ.ಪಿ.ಭಟ್ ಹೇಳಿದರು.

ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಸಂಸ್ಥೆಗಳ ನೂತನ ಕಾರ್ಯದರ್ಶಿಯಾಗಿ ಆಯ್ಕೆಗೊಂಡ ಅವರು ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಸಂಸ್ಥೆ ವತಿಯಿಂದ ಶನಿವಾರ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜು ಹಾಗೂ ಕನ್ನಡ ಮಾಧ್ಯಮ ಪ್ರೌಢಶಾಲೆಗಳ ದತ್ತಿ ಬಹುಮಾನ, ಕ್ರೀಡಾ ಸ್ಪರ್ಧೆಗಳಲ್ಲಿ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಮತ್ತು ಶೈಕ್ಷಣಿಕ ಸಾಧನೆ ಮಾಡಿದವರಿಗೆ ಬಹುಮಾನ ವಿತರಿಸಲಾಯಿತು. ಅದಮಾರು ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ ಶ್ರೀಧರ್ ಕೆ.ರಾವ್ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಮಂಡಳಿ ಪ್ರತಿನಿಧಿ ಪ್ರೊ.ನಿತ್ಯಾನಂದ, ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸಂಜೀವ ನಾಯ್ಕ, ಕನ್ನಡ ಮಾಧ್ಯಮ ಪ್ರೌಢಶಾಲೆ ಮುಖ್ಯ ಶಿಕ್ಷಕ ಶ್ರೀಕಾಂತ್ ರಾವ್, ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯ ಶಿಕ್ಷಕ ಮಂಜುನಾಥ ಎ.ವಿ., ದೈಹಿಕ ಶಿಕ್ಷಣ ಉಪನ್ಯಾಸಕ ಸುಜಿತ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕ ಸಂದೀಪ್ ಕುಮಾರ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶ್ರೀರಕ್ಷಾ ಹೆಗಡೆ ಸ್ವಾಗತಿಸಿದರು. ಅಖಿಲೇಶ್ ಕಾರ್ಯಕ್ರಮ ನಿರೂಪಿಸಿದರು. ಸಿಂಚನ ಜಿ.ವಂದಿಸಿದರು.