ಜಿಲ್ಲೆ

ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ವಹಿಸಲು ನಕಾರ; ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ವಿಜಯವಾಣಿ ಸುದ್ದಿಜಾಲ ಧಾರವಾಡ

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಧಾರವಾಡ ಹೈಕೋರ್ಟ್ ಪೀಠ ಬಿಗ್ ರಿಲೀಫ್ ನೀಡಿದೆ. ತೀವ್ರ ಕುತೂಹಲ ಕೆರಳಿಸಿದ್ದ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಶುಕ್ರವಾರ ವಜಾಗೊಳಿಸಿದೆ. ಪ್ರಕರಣದ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ಮೈಸೂರಿನ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ.

ಲೋಕಾಯುಕ್ತ ಪೊಲೀಸರು ಪ್ರಕರಣದ ತನಿಖೆಯನ್ನು ಸರಿಯಾಗಿ ನಡೆಸಿಲ್ಲ. ಹೀಗಾಗಿ ಸಿಬಿಐಗೆ ವಹಿಸಬೇಕು ಎಂದು ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಜ. 27ರಂದು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಸುದೀರ್ಘ ವಾದ- ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿತ್ತು. ತೀರ್ಪು ಪ್ರಕಟಿಸಿರುವ ಪೀಠ, ಲೋಕಾಯುಕ್ತ ಕೂಡ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ಅಭಿಪ್ರಾಯಪಟ್ಟು, ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿತು.

ಸುಪ್ರೀಂ ಕೋರ್ಟ್ಗೆ ಮೊರೆ:

ತೀರ್ಪು ಪ್ರಕಟವಾದ ನಂತರ ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ಲಕ್ಷ್ಮಣ ಕುಲಕರ್ಣಿ ಮಾತನಾಡಿ, ಸಿಬಿಐ ತನಿಖೆಗೆ ಕೋರಿ ಸಮರ್ಪಕ ವಾದ ಮಂಡಿಸಿದ್ದೆವು. ನ್ಯಾಯಾಲಯ ಸಿಬಿಐಗೆ ವಹಿಸುವ ವಿಶ್ವಾಸ ಇತ್ತು. ಕಾನೂನಿಗೆ ತಲೆಬಾಗಲೇಬೇಕು. ಸೀನಿಯರ್‌ಗಳ ಜತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ. ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವುದು ಖಚಿತ ಎಂದರು.