ಗದಗ: ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ವತಿಯಿಂದ 2025ರ ಸಾಲಿನಲ್ಲಿ ಯುವನಿಧಿ ಯೋಜನೆಯಡಿ ನೋಂದಣಿ ಆರಂಭವಾಗಿದೆ. ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, 2024- 25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025ರಲ್ಲಿ ಸ್ನಾತಕೋತ್ತರ ಪದವಿ, ಪದವಿ ಹಾಗೂ ಡಿಪ್ಲೊಮಾ ಪದವಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು 6 ತಿಂಗಳು ಉದ್ಯೋಗ ಹೊಂದಿಲ್ಲದವರು ಹಾಗೂ ಉನ್ನತ ವ್ಯಾಸಂಗವನ್ನು ಮುಂದುವರಿಸದೆ ಇದ್ದವರು. ಕನಿಷ್ಠ 6 ವರ್ಷ ಕರ್ನಾಟಕದ ರಹವಾಸಿ ಆಗಿರುವವರು, ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ಪಡೆಯಬಹುದಾಗಿದೆ. ಈ ಯೋಜನೆಯಡಿ ಪದವೀಧರರಿಗೆ ಪ್ರತಿ ತಿಂಗಳು 3000 ರೂ, ಹಾಗೂ ಡಿಪ್ಲೊಮಾ ಉತ್ತೀರ್ಣರಾದವರಿಗೆ 1,500 ರೂ. ನಿರುದ್ಯೋಗಿ ಭತ್ಯೆ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.