ಜಿಲ್ಲೆ

ರಾಜ್ಯ ಸರ್ಕಾರದ ನೀತಿ ಖಂಡಿಸಿ ಪ್ರತಿಭಟನೆ

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಜ್ಯ ಸರ್ಕಾರಿ ಏಕಾಏಕಿ ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆ ಮಾಡಿದ್ದರಿಂದ ಸಾಗಾಣಿಕೆ ವೆಚ್ಚದಲ್ಲಿ ಏರಿಕೆ ಕಾಣುವ ಮೂಲಕ ಅಗತ್ಯ ವಸ್ತುಗಳ ಬೆಲೆ ಸಹಜವಾಗಿಯೇ ಹೆಚ್ಚಲಿದೆ. ಹೀಗಾಗಿ ಸರ್ಕಾರದ ಕ್ರಮ ಖಂಡಿಸಿ ಜೆಡಿಎಸ್​ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಚಿವ ಆಲ್ಕೋಡ್​ ಹನುಮಂತಪ್ಪ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ. ಶಕ್ತಿ ಯೋಜನೆ ಅನುಷ್ಠಾನದಿಂದ ಬಸ್​ಗಳ ಸಂಖ್ಯೆ ಕಡಿಮೆ ಮಾಡಲಾಗಿದೆ. ಇದರಿಂದ ಪರ ಊರಿಗೆ ಹೋಗಿ ಕಲಿಯುವ ವಿದ್ಯಾಥಿರ್ಗಳಿಗೆ ಅತೀವ ತೊಂದರೆಯಾಗಿದೆ ಎಂದು ದೂರಿದರು.
ಜಿಲ್ಲೆಯಲ್ಲಿ ವಸತಿ ನಿಲಯಗಳ ಸಂಖ್ಯೆ ಕಡಿಮೆ ಇರುವ ಕಾರಣ ಮಕ್ಕಳಿಗೆ ಪ್ರವೇಶ ಸಿಗದಂತಾಗಿದೆ. ಹೊಸ ಹಾಸ್ಟೆಲ್​ಗಳ ನಿರ್ಮಾಣ, ಸದ್ಯದ ಹಾಸ್ಟೆಲ್​ಗಳ ದುರಸ್ತಿಗೆ ಕ್ರಮಕೈಗೊಳ್ಳಬೇಕು. ಆಹಾರ ಧಾನ್ಯಗಳ ದರ ಹೆಚ್ಚಳವಾಗುತ್ತಿದೆ. ಜೀವನ ನಿರ್ವಹಣೆ ದುಸ್ತರವಾಗುತ್ತಿರುವುದರಿಂದ ಗ್ರಾಮೀಣ ಜನರು ಮಹಾನಗರಗಳಿಗೆ ಗುಳೆ ಹೋಗುವುದು ಹೆಚ್ಚಾಗುತ್ತಿದೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಪೆಟ್ರೋಲ್​, ಡೀಸೆಲ್​ ದರ ಇಳಿಕೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಮುಖಂಡ ಮಂಜುನಾಥ ಹಗೇದಾರ ಮಾತನಾಡಿ, ಜಿಲ್ಲೆಯಲ್ಲಿ ಜೆಡಿಎಸ್​ ಬಲಪಡಿಸಲು ಹಿರಿಯರು ನಿರ್ಧರಿಸಿದ್ದು, ಮಾಜಿ ಸಚಿವ ಆಲ್ಕೋಡ ಹನುಮಂತಪ್ಪ ಮಾರ್ಗದರ್ಶನದಲ್ಲಿ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗುವುದು. ಕಾಂಗ್ರೆಸ್​ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಹೋರಾಟ ನಡೆಸಲಾಗುವುದು ಎಂದರು.