ಕುಶಾಲನಗರ:
ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ಹಾರಂಗಿ ಜಲಾಶಯ ಭರ್ತಿ ಆಗುವ ಹಂತದಲ್ಲಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಸೋಮವಾರ ಸಂಜೆ ಅಣೆಕಟ್ಟೆಯಿಂದ ನದಿಗೆ ನೀರು ಬಿಡಲಾಯಿತು. ಇದಕ್ಕೂ ಮೊದಲು ಅಣೆಕಟ್ಟೆ ಆವರಣದಲ್ಲಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಮಾತೆ ಕಾವೇರಿ ಮತ್ತು ಕ್ರಸ್ಟ್ ಗೇಟ್‌ಗಳಿಗೆ ಪೂಜೆ ಸಲ್ಲಿಸಿದರು. ನಂತರ 4 ಕ್ರಸ್ಟ್ ಗೇಟ್‌ಗಳ ಮೂಲಕ 1 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಯಿತು. ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಗಮನಿಸಿಕೊಂಡು ಮುಂದೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಲಾಗುವುದು ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದರು. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಜಲಾಶಯವು ಶೀಘ್ರವೇ ಗರಿಷ್ಠ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು. ಆದ್ದರಿಂದ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜನಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ ಅವರು ಕೋರಿದ್ದಾರೆ.
ಈ ಸಂದರ್ಭ ಕೂಡುಮಂಗಳೂರು ಗ್ರಾ.ಪಂ. ಅಧ್ಯಕ್ಷ ಭಾಸ್ಕರ ನಾಯಕ್, ಕುಡಾ ಅಧ್ಯಕ್ಷ, ಪ್ರಮೋದ್ ಮುತ್ತಪ್ಪ, ಹಾರಂಗಿ ಯೋಜನ ವೃತ್ತದ ಅಧಿಕ್ಷಕ ಅಭಿಯಂತರ ರಘುಪತಿ, ಕುಶಾಲನಗರ ತಹಸೀಲ್ದಾರ್ ಕಿರಣ್ ಗೌರಯ್ಯ, ಸಹಾಯಕ ಅಭಿಯಂತರ ಸಿದ್ದರಾಜು, ಕಾಂಗ್ರೆಸ್ ಮುಖಂಡರು ಮತ್ತಿತರರು ಇದ್ದರು.