ಅರಸೀಕೆರೆ : ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ದಿ.ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜೀವನ ನಮ್ಮೆಲ್ಲರ ಆದರ್ಶವಾಗಬೇಕು ಎಂದು ತಹಸೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್ ಹೇಳಿದರು.
ನಗರದ ಹೊರವಲಯದಲ್ಲಿರುವ ಕಸ್ತೂರ ಬಾ ಸೇವಾಶ್ರಮದ ಆವರಣದಲ್ಲಿ ಬುಧವಾರ ಬೆಳಗ್ಗೆ ಹಮ್ಮಿಕೊಂಡಿದ್ದ ಮಹಾತ್ಮಾ ಗಾಂಧಿ ಹಾಗೂ ದಿ.ಲಾಲ್ ಬಹಾದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಅಹಿಂಸೆ, ಸತ್ಯಾಗ್ರಹದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರ ಸೇವೆ ಸದಾ ಸ್ಮರಣೀಯ. ದೇಶದ ಪ್ರಧಾನಿಯಾಗಿ ಉತ್ತಮ ಆಡಳಿತ ನೀಡಿದ್ದ ದಿ.ಲಾಲ್ ಬಹಾದೂರ್ ಶಾಸ್ತ್ರಿ ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ ಎಂದು ಬಣ್ಣಿಸಿದರು.
ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಜೈ ಜವಾನ್, ಜೈ ಕಿಸಾನ್ ಘೋಷಣೆ ಜನ ಮಾನಸಲ್ಲಿ ಇಂದಿಗೂ ಚಿರಸ್ಥಾಯಿಯಾಗಿದೆ. ಸರಳ ಜೀವನ ಹೇಗೆ ನಡೆಸಬೇಕು ಎನ್ನುವುದಕ್ಕೆ ಇಬ್ಬರು ಮಹನೀಯರೇ ಸಾಕ್ಷಿ ಎಂದು ನಿದರ್ಶನ ಹೇಳಿದರು.
ತಹಸೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್ ಮಾತನಾಡಿದರು. ಬಿಇಒ ಮೋಹನ್ ಕುಮಾರ್, ನಗರಸಭೆ ಅಧ್ಯಕ್ಷ ಸಮೀವುಲ್ಲಾ, ಉಪಾಧ್ಯಕ್ಷ ಮನೋಹರ್, ರೈಲ್ವೆ ಮಹದೇವ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪರಶಿವಮೂರ್ತಿ ಸೇರಿದಂತೆ ಹಲವು ಗಣ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ, ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.