ಉಡುಪಿ: ಶರಣರ ಕವಿ ರೇಣುಕಾಚಾರ್ಯರ ಆದರ್ಶಗಳನ್ನು ಅರಿತುಕೊಂಡು ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜವನ್ನು ಸಮೃದ್ಧಿಯತ್ತ ಕೊಂಡೊಯ್ಯಬಹುದು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.
ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸತಿ ಇಲಾಖೆ ಆಶ್ರಯದಲ್ಲಿ ನಡೆದ ಶ್ರೀ ರೇಣುಕಾಚಾರ್ಯ ಜಯಂತಿ ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ಸಮಾಜದಲ್ಲಿ ಪರರ ಒಳಿತಿಗಾಗಿ ಜೀವಿಸುವ ಮನೋಭಾವನೆ ಹೊಂದಿರಬೇಕು. ಜೀವನದಲ್ಲಿ ಬರುವ ಕಷ್ಟಗಳನ್ನು ಎದುರಿಸಬೇಕೆಂದರೆ ಮನೋಸ್ಥೆ$ರ್ಯವನ್ನು ಬೆಳೆಸಿಕೊಳ್ಳಬೇಕು. ಹನ್ನೆರಡನೇ ಶತಮಾನದಲ್ಲಿ ಶರಣರು ಭಕ್ತಿ ಮತ್ತು ಜ್ಞಾನದ ಸಂಪಾದನೆಗಾಗಿ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಸಾಗಿ ವಚನಗಳ ಮೂಲಕ ಜನರಿಗೆ ಜೀವನದ ಸಂದೇಶ ಸಾರುತ್ತಿದ್ದರು ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ನಿತ್ಯಾನಂದ ವಿ.ಗಾಂವ್ಕರ್ ಮಾತನಾಡಿ, ಹನ್ನೆರಡನೇ ಶತಮಾನದಲ್ಲಿದ್ದ ಶರಣರ ಹಾಗೂ ಮಹಾನುಭವರ ಕೊಡುಗೆಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಪ್ರೇರಣೆಯಾಗಿಟ್ಟುಕೊಂಡರೆ ಬದುಕಲ್ಲಿ ಯಶಸ್ಸು ಕಾಣಬಹುದು ಎಂದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ನಿರಂಜನ ಯು.ಸಿ. ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಕನ್ನಡ ವಿಭಾಗದ ಉಪನ್ಯಾಸಕಿ ಸರಿತಾ ನಿರೂಪಿಸಿ, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ರತ್ನಮಾಲಾ ವಂದಿಸಿದರು.