ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ದೇವನಹಳ್ಳಿ ಕ್ರೀಡಾಂಗಣದಲ್ಲಿ ಜ.26 ರಂದು 76ನೇ ಗಣರಾಜ್ಯೋತ್ಸವ ದಿನ ಆಚರಣೆಯಾಗಲಿದ್ದು ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಎಲ್ಲ ಅಗತ್ಯ ಸಿದ್ದತೆ ಕೈಗೊಳ್ಳಬೇಕು ಹಾಗೆಯೇ ಗಣರಾಜ್ಯೋತ್ಸವದ ದಿನದಂದು ಜಿಲ್ಲಾ, ತಾಲೂಕು ಕಚೇರಿಗಳನ್ನು ದೀಪಾಲಂಕಾರದಿಂದ ಅಲಂಕೃತಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಸೂಚಿಸಿದರು.
ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. 76ನೇ ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ಜ.26 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಬೀರಸಂದ್ರ ಗ್ರಾಮದಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಬೆಳಗ್ಗೆ 7.30 ಕ್ಕೆ ಧ್ವಜಾರೋಹಣ ನೆರವೇರಿಸಲಾಗುವುದು. ನಂತರ ದೇವನಹಳ್ಳಿಯ ಕ್ರೀಡಾಂಗಣದಲ್ಲಿ ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಧ್ವಜಾರೋಹಣ ನೆರವೇರಿಸಲಿದ್ದಾರೆ ಬಳಿಕ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನ ಕಾರ್ಯಕ್ರಮಗಳು ನಡೆಯಲಿವೆ. ಇದಕ್ಕೆ ಸಂಬಂಧಪಟ್ಟಂತೆ ಜವಾಬ್ದಾರಿ ಹೊತ್ತಿರುವ ಅಧಿಕಾರಿಗಳು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಶಿಷ್ಟಾಚಾರದಂತೆ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಆಹ್ವಾನ ಪತ್ರಿಕೆಗಳ ಮುದ್ರಣ, ಕಾರ್ಯಕ್ರಮದ ವೇದಿಕೆ ನಿರ್ಮಾಣ ವ್ಯವಸ್ಥೆ, ವೇದಿಕೆಗೆ ಅಗತ್ಯವಾದ ಅಲಂಕಾರಿಕ ಹೂ ಗಿಡಗಳ ವ್ಯವಸ್ಥೆ, ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ಸಾಧಕರಿಗೆ ಪ್ರಶಸ್ತಿ, ಪಥಸಂಚಲನ, ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ಪ್ಲಾಸ್ಟಿಕ್ ಬಳಕೆ ನಿಷೇಧ ಸೇರಿ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಗಣರಾಜ್ಯೋತ್ಸವ ಆಚರಣೆಯನ್ನು ಯಶಸ್ವಿಗೊಳಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದರು.