ಚಿಕ್ಕಮಗಳೂರು ಎಡಿಸಿ ನಾರಾಯಣ ರಡ್ಡಿ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ರಾಮನವಮಿಯಂದು ನಿಗದಿಯಾಗಿರುವ ಕುವೆಂಪು ವಿವಿ ಸ್ನಾತಕೋತ್ತರ ಪದವಿ ಪರೀಕ್ಷೆ ಮುಂದೂಡಬೇಕು ಎಂದು ಮನವಿ ಮಾಡಿದರು. 
ಜಿಲ್ಲೆ

ರಾಮನವಮಿ ದಿನದ ಪರೀಕ್ಷೆ ಮುಂದೂಡುವಂತೆ ಮನವಿ

ನಿತ್ಯಾನಂದ ಎಸ್.ಎನ್.

ಚಿಕ್ಕಮಗಳೂರು: ರಾಮನವಮಿ ದಿನದಂದೇ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪರೀಕ್ಷೆ ನಿಗದಿಯಾಗಿದ್ದು, ಹಬ್ಬದ ಹಿನ್ನೆಲೆಯಲ್ಲಿ ಈಗಿನ ನಿಗದಿಯಾಗಿರುವ ಪರೀಕ್ಷೆಯನ್ನು ಮುಂದೂಡಬೇಕು ಎಂದು ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಎಡಿಸಿ ನಾರಾಯಣ ರಡ್ಡಿ ಕನಕ ರಡ್ಡಿ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಮನವಮಿ ಹಬ್ಬವನ್ನು ಇಡೀ ದೇಶಾದ್ಯಂತ ಹಿಂದುಗಳು ವಿಜೃಂಭಣೆಯಿಂದ ಆಚರಣೆ ಮಾಡುತ್ತಾರೆ. ಅದರಲ್ಲೂ ಈ ಬಾರಿ ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರತಿಷ್ಠೆ ನಡೆದಿರುವ ಹಿನ್ನೆಲೆಯಲ್ಲಿ ಸಂಭ್ರಮ ಸಡಗರ ಇನ್ನೂ ಹೆಚ್ಚಿರುತ್ತದೆ. ಹೀಗಾಗಿ ರಾಮನವಮಿ ಎಂದು ನಿಗದಿಯಾಗಿರುವ ಎಂಎ ಹಾಗೂ ಎಂಎಸ್ ಸಿ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಒತ್ತಾಯಿಸಿದರು.
ಈ ಹಿಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಅನುಕೂಲಕ್ಕೆ ತಕ್ಕಂತೆ ಶುಕ್ರವಾರ ನಡೆಯಬೇಕಿದ್ದ ಪರೀಕ್ಷೆಯನ್ನು ಅಂದು ಮಧ್ಯಾಹ್ನಕ್ಕೆ ಮುಂದೂಡಲಾಗಿತ್ತು. ಅದೇ ರೀತಿಯೇ ರಾಮನವಮಿ ದಿನ ನಿಗದಿಯಾಗಿರುವ ಪರೀಕ್ಷೆಯನ್ನು ಮುಂದೂಡಬೇಕು ಎಂದು ಕುವೆಂಪು ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್, ಪ್ರಮುಖರಾದ ಸಚಿನ್, ಜೀವನ್, ಅಂಕಿತಾ ಮತ್ತಿತರರಿದ್ದರು.