ಸೋಮವಾರಪೇಟೆ: ತಾಲೂಕು ಆಡಳಿತ ಸೌಧದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಸಂಬಂಧ ಪೂರ್ವಭಾವಿ ಸಭೆಯನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.
ತಹಸೀಲ್ದಾರ್ ಎಸ್.ಎನ್.ನರಗುಂದ ಮಾತನಾಡಿ, ಸುವರ್ಣ ಸಂಭ್ರಮದ ಅಂಗವಾಗಿ ಅದ್ದೂರಿಯಾಗಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ರಾಜ್ಯೋತ್ಸವ ಆಚರಿಸಲಾಗುವುದು. ಶಾಸಕ ಡಾ.ಮಂತರ್‌ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಧ್ವಜಾರೋಹಣವನ್ನು ತಹಸೀಲ್ದಾರ್ ನೇರವೇರಿಸಲಿರುವರು. ಬೆಟ್ಟದಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಹಾಗೂ ಸಾಹಿತಿ ಕೆ.ಎನ್. ಸತೀಶ್ ಕಾಜೂರು, ಕವಿ ನ.ಲ.ವಿಜಯ ಅವರನ್ನು ಸನ್ಮಾನಿಸಲಾಗುವುದು ಎಂದರು.
ಪಟ್ಟಣದ ಜೇಸಿ ವೇದಿಕೆ ಎದುರಿನಿಂದ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸ್ತಬ್ಧ ಚಿತ್ರಗಳ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ನಡೆಯಲಿದೆ. ನಂತರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.
ಸಮಿತಿ ಸದಸ್ಯರಾದ ಎಚ್.ಸಿ.ನಾಗೇಶ್, ಕವನ್ ಕಾರ್ಯಪ್ಪ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.