ವಿಜಯವಾಣಿ ಸುದ್ದಿಜಾಲ ತುಮಕೂರು
ಆಧುನಿಕ ಕುಟುಂಬ ವ್ಯವಸ್ಥೆಯಲ್ಲಿನ ಬದಲಾವಣೆ ಕಾರಣದಿಂದ ಹಿರಿಯರ ಬಗ್ಗೆ ಗೌರವ ಯುವ ಪೀಳಿಗೆಯಲ್ಲಿ ಕಡಿಮೆಯಾಗುತ್ತಿದೆ ಎಂದು ತುಮಕೂರು ವಿವಿ ಸಮಾಜಕಾರ್ಯ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಬಿ.ರಮೇಶ್ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಉಪನ್ಯಾಸ ನೀಡಿದ ಅವರು, ಮಕ್ಕಳಿಗೆ ಹಿರಿಯರ ಬಗ್ಗೆ ಗೌರವ ಹಾಗೂ ಕರ್ತವ್ಯದ ಬಗ್ಗೆ ಶಾಲೆ, ಕಾಲೇಜು ದಿನಗಳಲ್ಲಿ ಮನವರಿಕೆ ಮಾಡಿಕೊಡಬೇಕಿದೆ ಎಂದರು. ಹಿರಿಯ ನಾಗರಿಕರು ಜೀವಿತಾವಧಿಯ ಕೊನೇ ಕ್ಷಣದವರೆಗೂ ನೆಮ್ಮದಿಯಿಂದ ಬದುಕುವಂತಹ ವಾತಾವರಣವನ್ನು ಎಲ್ಲ ಕುಟುಂಬಗಳಲ್ಲಿಯೂ ಕಲ್ಪಿಸಿಕೊಡಬೇಕು. ಕೇಂದ್ರ ಕುಟುಂಬ ವ್ಯವಸ್ಥೆಯಲ್ಲಿ ಹಿರಿಯರನ್ನು ಮನೆಯಲ್ಲಿಟ್ಟುಕೊಂಡು ಸಲಹುವವರ ಸಂಖ್ಯೆಯೂ ಕಡಿಮೆಯಾಗುತ್ತಿದೆ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ಮಾತನಾಡಿ, ಹಿರಿಯ ನಾಗರಿಕರು ತಮ್ಮ ವಿಶ್ರಾಂತ ಜೀವನದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ ಎಂದರಲ್ಲದೆ, ತಾವು ಶ್ರಮದಿಂದ ದುಡಿದ ಸ್ಥಿರಾಸ್ತಿ, ಚರಾಸ್ತಿಗಳನ್ನು ತಾವೇ ಅನುಭವಿಸುವ ಮೂಲಕ ಸಂತಸದಿಂದ ಬದುಕಬೇಕು ಎಂದರು. ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪಾ ಎಂ.ದೊಡ್ಡಮನಿ ಮಾತನಾಡಿ, ಹಿರಿಯ ನಾಗರಿಕರಿಗೆ ಮಕ್ಕಳಿಂದ ತೊಂದರೆ, ಸಮಸ್ಯೆಗಳು ಉಂಟಾದಲ್ಲಿ ಸಹಾಯವಾಣಿ ಕೇಂದ್ರಕ್ಕೆ ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.
ಜಿಲ್ಲೆಯ ಊರುಕೆರೆ ಅಂಚೆ ಭೋವಿಪಾಳ್ಯದ ಶತಾಯುಷಿ ಚನ್ನಬಸವಯ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು. ಕ್ರೀಡಾ ಮತ್ತು ಸಾಂಸತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ವಿಜೇತರಾದವರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎನ್.ಚೇತನ್ ಕುಮಾರ್, ಜಿಲ್ಲಾ ನಿವೃತ್ತ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಬಾ.ಹ.ರಮಾಕುಮಾರಿ ಮತ್ತಿತರರು ಇದ್ದರು.