ಜಿಲ್ಲೆ

ಪರಿಷ್ಕೃತ ಪಟ್ಟಿಯಲ್ಲಿ 10,61,289 ಮತದಾರರು

ಗೋಪಾಲಕೃಷ್ಣ ಪಾದೂರ್

ಉಡುಪಿ: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 5,12,232 ಪುರುಷರು, 5,49,046 ಮಹಿಳೆಯರು ಹಾಗೂ 11 ಜನ ತೃತೀಯ ಲಿಂಗಿಗಳು ಸೇರಿದಂತೆ 10,61,289 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅಂತಿಮ ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಹಸ್ತಾಂತರಿಸಿ ಮಾತನಾಡಿದರು.

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,17,890 ಪುರುಷರು, 1,22,914 ಮಹಿಳೆಯರು ಹಾಗೂ 2 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,40,806 ಮತದಾರರು, ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,01,959 ಪುರುಷರು, 1,10,025 ಮಹಿಳೆಯರು ಹಾಗೂ 2 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,11,986 ಮತದಾರರು, ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,06,782 ಪುರುಷರು, 1,14,839 ಮಹಿಳೆಯರು ಹಾಗೂ 3 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 2,21,624, ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 92,598 ಪುರುಷರು, 1,00,583 ಮಹಿಳೆಯರು ಹಾಗೂ 4 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 1,93,185 ಮತದಾರರು ಮತ್ತು ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 93,003 ಪುರುಷರು, 1,00,685 ಮಹಿಳೆಯರು ಸೇರಿದಂತೆ ಒಟ್ಟು 1,93,688 ಮತದಾರರು ನೋಂದಣಿಯಾಗಿದ್ದಾರೆ ಎಂದರು.

ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ 5287 ಜನರು ಹೊಸದಾಗಿ ಸೇರ್ಪಡೆಗೆ ಅರ್ಜಿ ಸಲ್ಲಿಸಿದ್ದಾರೆ. 7,398 ಅರ್ಜಿಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಹಾಗೂ ತಿದ್ದುಪಡಿಗಾಗಿ 5499 ಜನರಿಂದ ಅರ್ಜಿಗಳು ಸಲ್ಲಿಕೆಯಾಗಿವೆ. 7398 ಮಂದಿಯನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. 5499 ಮತದಾರರ ಹೆಸರನ್ನು ತಿದ್ದುಪಡಿ ಮಾಡಲಾಗಿದೆ ಎಂದರು.

25ಕ್ಕೆ ಮತದಾರರ ದಿನಾಚರಣೆ

ಜ. 25 ರಂದು ಬೆಳಗ್ಗೆ 10.30 ಕ್ಕೆ ಜಿಲ್ಲಾ ಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್​ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಹೊಸದಾಗಿ ನೋಂದಣಿಯಾದ ಯುವ ಮತದಾರರಿಗೆ ಗುರುತಿನ ಚೀಟಿಯನ್ನು ವಿತರಿಸಲಾಗುವುದು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್​, ವಾರ್ತಾಧಿಕಾರಿ ಮಂಜುನಾಥ್​ ಬಿ, ಬಿಜೆಪಿಯ ಚಂದ್ರಶೇಖರ ಪ್ರಭು, ಕಾಂಗ್ರೆಸ್​ನ ಹಬೀಬ್​ ಅಲಿ, ಜೆ.ಡಿ.ಎಸ್​ನ ಜಯರಾಂ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.