ಜಿಲ್ಲೆ

ವಾಹನ ಚಲಾಯಿಸುವಾಗ ಇರಲಿ ಸಂಯಮ

ಶಿವರಾಜ.ಎಂ

ವಿಜಯವಾಣಿ ಸುದ್ದಿಜಾಲ ದೊಡ್ಡಬೆಳವಂಗಲ
ಜೀವ ಇದ್ದರೆ ಜೀವನ ಎಂಬ ಅಂಶವನ್ನು ಅರಿತು ಸಂಚಾರ ನಿಯಮ ಪಾಲನೆ ಜತೆಗೆ ತಾಳ್ಮೆಯಿಂದ ವಾಹನ ಚಾಲನೆ ಮಾಡಬೇಕು ಎಂದು ಪೊಲೀಸ್ ಇನ್‌ಸ್ಪೆಕ್ಟರ್ ವಿಜಯಲಕ್ಷ್ಮೀ ಹೇಳಿದರು.
ಸಾಸಲು ಹೋಬಳಿಯ ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯಿಂದ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತೆ ಕುರಿತ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು. ವೇಗ ಕಡಿಮೆಗೊಳಿಸಿ ಪ್ರತಿಯೊಬ್ಬರೂ ತಾಳ್ಮೆಯಿಂದ ವಾಹನ ಚಾಲನೆ ಮಾಡುವುದರಿಂದ ಎಷ್ಟೋ ಅಫಘಾತ ತಡೆಯಲು ಸಾಧ್ಯ. ಕೆಲ ದ್ವಿಚಕ್ರವಾಹನ ಚಾಲಕರು ಹೆಲ್ಮೆಟ್ ಧರಿಸದೆ ಅಪಘಾತಕ್ಕೊಳಗಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಚಾಲನೆ ವೇಳೆ ಮೊಬೈಲ್‌ನಲ್ಲಿ ಮಾತನಾಡುತ್ತ ವೇಗವಾಗಿ ಸವಾರಿ ಮಾಡುವುದನ್ನು ನಿಲ್ಲಿಸಬೇಕು, ರಸ್ತೆ ಸುರಕ್ಷತಾ ಕ್ರಮ ಹಾಗೂ ಸಂಚಾರ ನಿಯಮಗಳು ಕೇವಲ ಪೊಲೀಸರಿಗೆ ಸಂಬಂಧಿಸಿದ್ದಲ್ಲ, ಅದು ಪ್ರತಿಯೊಬ್ಬ ಸಾರ್ವಜನಿಕರ ಹೊಣೆಗಾರಿಕೆ ಎಂದರು.
18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ವಾಹನ ಚಲಾಯಿಸಲು ಕಾನೂನಿನಲ್ಲಿ ಅವಕಾಶ ಇಲ್ಲ. ಅದರಂತೆ ಕಾನೂನು ಪಾಲನೆ ಮಾಡಬೇಕು ಎಂದು ಶಾಲಾ ಮಕ್ಕಳಿಗೆ ಸಲಹೆ ನೀಡಿದರು.
ಸಂಚಾರ ನಿಯಮಗಳ ಪಾಲನೆ, ರಸ್ತೆ ಅಪಘಾತಕ್ಕೆ ಕಾರಣಗಳು, ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳು, ಶಾಲಾ ಬಸ್ ಅಥವಾ ಸಾರ್ವಜನಿಕ ಸಾರಿಗೆಯನ್ನು ಬಳಸುವಾಗ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಲಾಯಿತು