ಕಾರವಾರ: ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿನ ಎಲ್ಲಾ ಸೇತುವೆಗಳ ದೃಡತೆಯ ಬಗ್ಗೆ ಸಂಪೂರ್ಣ ವರದಿಯನ್ನು ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಸ್ತುತ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಆರಂಭಗೊಂಡಿದ್ದು, ವಾಡಿಕೆಯಂತೆ ಜುಲೈ ತಿಂಗಳಲ್ಲಿ ಅತೀ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿದ್ದು, ಜಿಲ್ಲೆಯ ಹೆದ್ದಾರಿಗಳಲ್ಲಿ ಸುರಕ್ಷಿತ ಸಂಚಾರ ಕುರಿತಂತೆ ಮುನ್ನೆಚ್ಚರಿಕೆ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿರುವ ಎಲ್ಲಾ ಸೇತುವೆಗಳ ದೃಢತೆಯ ಕುರಿತಂತೆ ವಿವರವಾದ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಯಾವುದೇ ಅವಘಡಗಳು ಸಂಭವಿಸಿದ್ದಲ್ಲಿ ಸಂಬAದಪಟ್ಟ ಅಧಿಕಾರಿಗಳನ್ನೇ ಹೊಣೆಗಾರನ್ನಾಗಿ ಮಾಡಲಾಗುವುದು ಎಂದರು.
ಜಿಲ್ಲೆಯಲ್ಲಿನ ರಾಷ್ಟ್ರಿಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿರುವ ಗುಡ್ಡಕುಸಿತ ಪ್ರದೇಶಗಳ ವಿವರಗಳನ್ನು ಮತ್ತು ಅಲ್ಲಿ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳುವಂತೆ ಈಗಾಗಲೇ ಸಂಬAಧಪಟ್ಟ ಹೆದ್ದಾರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಈ ಪ್ರದೇಶದಲ್ಲಿ ಸೂಚನಾ ಫಲಕಗಳನ್ನು ಅಳವಡಿಸುವುದು, ಸ್ಪಾಟರ್ ಗಳನ್ನು ನೇಮಕ ಮಾಡಿ ನಿರಂತರವಾಗಿ ಗುಡ್ಡ ಕುಸಿತದ ಸ್ಥಳಗಳನ್ನು ಪರಿಶೀಲನೆ ನಡೆಸಬೇಕು, ಅಗತ್ಯವಿದ್ದಲ್ಲಿ ಮುಂಜಾಗ್ರತಾ ಕ್ರಮವಾಗಿ ಸಂಚಾರ ಬದಲಾವಣೆ ಮಾಡುವ ಮೂಲಕ ಯಾವುದೇ ಹಾನಿಯಾಗದಂತೆ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ಅನಾಹುತವಾದಲ್ಲಿ ಅಧಿಕಾರಿಗಳನ್ನೇ ಹೊಣೆಗಾರನ್ನಾಗಿ ಮಾಡಲಾಗುವುದು ಎಂದರು.
ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ನೀಡಿರುವ ಪರಿಹಾರ ಕ್ರಮಗಳನ್ನು ತಪ್ಪದೇ ಅನುಷ್ಠಾನಗೊಳಿಸಬೇಕು, ಸ್ಪೀಡ್ ಬ್ರೇಕರ್‌ಗಳು , ಅಗತ್ಯ ಸೂಚನಾ ಫಲಗಳು, ಎಚ್ಚರಿಕಾ ಫಲಕಗಳು, ರಾತ್ರಿ ವೇಳೆ ಎಚ್ಚರಿಕೆ ನೀಡುವ ರಿಫ್ಲೆಕ್ಟರ್‌ಗಳ ನ್ನು ಅಳವಡಿಸಬೇಕು, ಬೀದಿ ದೀಪಗಳ ಮತ್ತು ಹೈಮಾಸ್ಟ್ ದೀಪಗಳ ಅಳವಡಿಕೆ ಮಾಡಬೇಕು, ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡೆತಡೆಯಾದಲ್ಲಿ ತೆರವುಗೊಳಿಸಲು ಅಗತ್ಯ ಉಪಕರಣಗಳು, ಕ್ರೇನ್, ಆಂಬುಲೆನ್ಸ್ ಮತ್ತು ಅಗತ್ಯ ಸಿಬ್ಬಂದಿಯನ್ನು ಸಿದ್ದವಾಗಿಟ್ಟುಕೊಂಡಿರಬೇಕು ಎಂದರು.
ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ನಿರಂತರವಾಗಿ ವಾಹನಗಳನ್ನು ತಪಾಸಣೆ ನಡೆಸಬೇಕು, ಗೂಡ್ಸ್ ವಾಹನಗಳಲ್ಲಿ ಸಾರ್ವಜನಿಕರನ್ನು ಕರೆದೊಯ್ಯುವುದರ ಬಗ್ಗೆ ಮತ್ತು ಹೆಚ್ಚು ಭಾರದ ವಾಹನಗಳ ಬಗ್ಗೆ ಪರಿಶೀಲನೆ ನಡೆಸಬೇಕು ಎಂದರು.
ಶಿರೂರು ಗುಡ್ಡ ಕುಸಿತದ ಬಳಿ ಸಂರಕ್ಷಣಾ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕು, ಬರ್ಗಿ ಬಳಿ ಅಪಘಾತಗಳು ನಡೆಯದಂತೆ ಬ್ಯಾರಿಕೇಡ್ ಅಳವಡಿಸಬೇಕು, ಕುಮಟಾ ಶಿರಸಿ ರಸ್ತೆ ಬಳಿ ಹೈ ಮಾಸ್ಟ್ ಅಳವಡಿಸಬೇಕು, ಕಾರವಾರ ಫ್ಲೈ ಓವರ್ ಕೆಳಗೆ ಬೀದಿ ದೀಪ ಅಳವಡಿಸಬೇಕು ಎಂದ ಜಿಲ್ಲಾಧಿಕಾರಿಗಳು, ಹಿಮದಿನ 2 ವರ್ಷಗಳಲ್ಲಿ ಸಂಭವಿಸಿರುವ ಅಪಘಾತ ಪ್ರಕರಣಗಳನ್ನು ಪರಿಶೀಲಿಸಿ, ಅಪಘಾತಕ್ಕೆ ಕಾರಣಗಳು ಮತ್ತು ಆ ಪ್ರದೇಶದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ಸಿದ್ದಪಡಿಸಿ, ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವ ಮೂಲಕ ಜಿಲ್ಲೆಯಲ್ಲಿ ಅಪಘಾತ ಪ್ರಕರಣಗಳು ಕಡಿಮೆಯಾಗುವಂತೆ ಜಾಗೃತಿ ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಬಾಕಿ ಇರುವ ರಾಮನಗರ-ಅನ್ ಮೋಡ್ ರಸ್ತೆ ಕಾಮಗಾರಿ ಸೇರಿದಂತೆತೆ ಇತರೆ ಎಲ್ಲಾ ಹೆದ್ದಾರಿ ಕಾಮಗಾರಿಗಳ ಪ್ರಗತಿಯ ಬಗ್ಗೆ ಮತ್ತು ಅಪಘಾತಗಳು ಸಂಭವಿಸುವ ಬ್ಲಾಕ್ ಸ್ಟಾಟ್ ಗಳ ನಿವಾರಣೆ ಕುರಿತಂತೆ ವಿಸ್ತೃತ ಚರ್ಚೆ ನಡೆಯಿತು. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್, ಉಪ ವಿಭಾಗಾಧಿಕಾರಿ ಕನಿಷ್ಕ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಚಂದ್ರಶೇಖರ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.