ಶ್ರೀರಂಗಪಟ್ಟಣ: ಕಾವೇರಿ ಜಲಾಶಯ ವ್ಯಾಪ್ತಿಯ ನಾಲೆಗಳಿಗೆ ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ ಭೂಮಿ ತಾಯಿ ಹೋರಾಟ ಸಮಿತಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುವೆಂಪು ವೃತ್ತದಲ್ಲಿ ಜಮಾವಣೆಗೊಂಡ ಸಮಿತಿ ಕಾರ್ಯಕರ್ತರು ರೈತ ನಾಯಕ ಕೆ.ಎಸ್.ನಂಜುಂಡೇಗೌಡ ನೇತೃತ್ವದಲ್ಲಿ ಕೆಲ ಕಾಲ ರಸ್ತೆ ಸಂಚಾರ ತಡೆ ನಡೆಸಿ ರಾಜ್ಯ ಸರ್ಕಾರ ಹಾಗೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಮುಖಂಡ ಕೆ.ಎಸ್.ನಂಜುಂಡೇಗೌಡ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ರಾಜ್ಯದಲ್ಲಿ ಬರಗಾಲ ಆವರಿಸುವ ಜತೆಗೆ ನಮ್ಮ ಜೀವನಾಡಿ ಕನ್ನಂಬಾಡಿ ಜಲಾಶಯ ಬತ್ತಿಹೋಗುವ ನಂಬಿಕೆಯನ್ನು ಜನರು ಹೊಂದಿದ್ದು, ಅದಕ್ಕೆ ಪೂರಕವೆಂಬಂತೆ ಜನರು ಭೀಕರ ಬರಗಾಲ ಎದುರಿಸುವ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿದರು.
ಸರ್ಕಾರದ ನಿರ್ಲಕ್ಷೃ ಮನಸ್ಥಿತಿ ಹಾಗೂ ಬೇಜವಾಬ್ದಾರಿ ಆಡಳಿತದಿಂದ ತಮಿಳುನಾಡಿಗೆ ನದಿ ಮೂಲಕ ನಿರಂತರವಾಗಿ ಕಾವೇರಿ ನೀರು ಹರಿಸಿ ಇದೀಗ ರಾಜ್ಯದ ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು ನೀಡದೆ ಮರಣ ಶಾಸನ ಬರೆಯಲು ಮುಂದಾಗಿದ್ದು, ಜಾನುವಾರುಗಳಿಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ ಎಂದರು.
ಬೇಸಿಗೆಯಲ್ಲಿ ಕಟ್ಟು ಪದ್ಧತಿಯಂತೆ ಸಿಡಿಎಸ್, ವಿಸಿ, ವಿರಿಜಾ ನಾಲೆಗಳಿಗೆ ಶೀಘ್ರವೇ ನೀರು ಹರಿಸದಿದ್ದರೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ನೀರಾವರಿ ಸಚಿವ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳಿಗೆ ಜಿಲ್ಲೆಯ ರೈತರು ೇರಾವ್ ಮಾಡಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ಭೂಮಿ ತಾಯಿ ಹೋರಾಟ ಸಮಿತಿ ಅಧ್ಯಕ್ಷ ಬಿ.ಸಿ.ಕೃಷ್ಣೇಗೌಡ, ಉಪಾಧ್ಯಕ್ಷ ಹನಿಯಂಬಾಡಿ ನಾಗರಾಜು, ಪ್ರಧಾನ ಕಾರ್ಯದರ್ಶಿ ಎಂ.ವಿ.ಕೃಷ್ಣ, ದರ್ಶನ್, ಖಜಾಂಚಿ ಪುಟ್ಟಮಾದು, ಸಂಚಾಲಕರಾದ ಬಲ್ಲೇನಹಳ್ಳಿ ಮಂಜುನಾಥ್, ದರಸಗುಪ್ಪೆ ರವಿ ಲಕ್ಷ್ಮಣ, ನಾಗರಾಜು, ಹೊಸಹಳ್ಳಿ ಸ್ವಾಮಿ, ಶ್ರೀಧರ್, ಹೆಬ್ಬಾಡಿಹುಂಡಿ ಸಿದ್ದೇಗೌಡ, ಹೊಸೂರು ಶಿವರಾಜು, ಶಿವಣ್ಣ ಇತರರು ಇದ್ದರು.