ಜಿಲ್ಲೆ

ನಾಳೆ ಮಧ್ಯಾಹ್ನದವರೆಗೆ ಚಾಮುಂಡಿ ಬೆಟ್ಟಕ್ಕಿಲ್ಲ ಪ್ರವೇಶ- ಜಿಲ್ಲಾಧಿಕಾರಿ ಆದೇಶ

suchetana

ಮೈಸೂರು: ಚಾಮುಂಡಿಬೆಟ್ಟದಲ್ಲಿ ರಥೋತ್ಸವ ಹಿನ್ನೆಲೆಯಲ್ಲಿ ಇಂದು (ಬುಧವಾರ) ಸಂಜೆ 6 ಗಂಟೆಯಿಂದ ನಾಳೆ ಮಧ್ಯಾಹ್ನ 12 ಗಂಟೆವರೆಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.

ಈ ಕುರಿತು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

29ರಂದು ಬೆಳಗ್ಗೆ 9.45ರಿಂದ 10.5ರವರೆಗೆ ಬೆಟ್ಟದಲ್ಲಿ ಚಾಮುಂಡೇಶ್ವರಿ ರಥೋತ್ಸವ ನಡೆಯಲಿದೆ. ರಥೋತ್ಸವಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದೆ.

ಪ್ರವೇಶ ನಿಷೇಧವಿರುವ ದಿನಗಳಂದು ಕೇಂದ್ರ ಮತ್ತು ರಾಜ್ಯ ಸರ್ಕಾರ ಘೋಷಿಸಿದ ಕೋವಿಡ್ ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯ ವ್ಯಕ್ತಿಗಳು, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು ಮತ್ತು ತುರ್ತು ಸೇವಾ ವಾಹನಗಳು, ಗ್ರಾಮಸ್ಥರ ವಾಹನಗಳನ್ನು ಹೊರತುಪಡಿಸಿ ಸಾರ್ವಜನಿಕರ ವಾಹನ ಮತ್ತು ಖಾಸಗಿ ವಾಹನಗಳು ಬೆಟ್ಟಕ್ಕೆ ಬರುವುದನ್ನು ನಿಷೇಧಿಸಲಾಗಿದೆ.

ಈ ಎರಡೂ ದಿನಗಳು ದೇವಾಲಯದ ಪ್ರದೇಶದಲ್ಲಿ ದೇವಾಲಯದ ವತಿಯಿಂದ ಹಾಗೂ ದಾನಿಗಳಿಂದ ಸಾಮೂಹಿಕವಾಗಿ ಹಾಗೂ ಸಾರ್ವಜನಿಕವಾಗಿ ಪ್ರಸಾದ ತಯಾರಿಸುವುದು, ವಿತರಿಸುವುದನ್ನು ನಿಷೇಧಿಸಲಾಗಿದೆ.

ದೇವಾಲಯದಲ್ಲಿ ಜರುಗುವ ರಥೋತ್ಸವ ಸಂಬಂಧಿತ ಧಾರ್ಮಿಕ ಕಾರ್ಯಕ್ರಮಗಳು ಸಾಂಪ್ರದಾಯಿಕವಾಗಿ ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿಯ ಉಪಸ್ಥಿತಿಯಲ್ಲಿ ಎಂದಿನಂತೆ ನಡೆಸಬಹುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.