ಬೆಂಗಳೂರು: ಹಿಜಾಬ್ ಗಲಾಟೆಯಿಂದಾಗಿ ಬಂದಾಗಿದ್ದ ಶಾಲಾ- ಕಾಲೇಜುಗಳನ್ನು ನಾಳೆ ಬುಧವಾರದಿಂದ (ಫೆ.16) ಆಚರಿಸಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದಿರುವ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಹಲವು ಕಾಲೇಜುಗಳು ಕೆಲ ದಿನಗಳಿಂದ ಆನ್‌ಲೈನ್ ತರಗತಿಗಳನ್ನು ಆರಂಭಿಸಿದ್ದವು. ಇದೀಗ 16ರಿಂದ ಪುನಃ ಆಫ್‌ಲೈನ್ ತರಗತಿ ನಡೆಸಲು ಅನುಮತಿ ನೀಡಲಾಗಿದೆ.
ಈ ಕುರಿತು ಸಭೆಯ ಬಳಿಕ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಪಾಲಕರು ಕಾಲೇಜು ಆರಂಭಕ್ಕೆ ಉತ್ಸುಕರಾಗಿದ್ದಾರೆ. ಯಾರೇ ಆಗಲಿ ಹೈಕೋರ್ಟ್ ಆದೇಶ ಉಲ್ಲಂಘಿಸುವಂತಿಲ್ಲ, ಆದೇಶ ಪಾಲಿಸಬೇಕು. ಘಟನೆ ಸಂಬಂಧ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ತಿಳಿಸಿದರು. ಪಾಲಕರು, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ. ಪೊಲೀಸ್ ಇಲಾಖೆ ಇದಕ್ಕೆ ಬೇಕಾದ ಬಂದೋಬಸ್ತ್ ಕೈಗೊಳ್ಳಲಿದೆ ಎಂದರು.
ಸಭೆಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ, ಡಿಜಿ ಐಜಿಪಿ ಪ್ರವೀಣ್ ಸೂದ್ ಸೇರಿ ಶಿಕ್ಷಣ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.