ಜಿಲ್ಲೆ

ಸಿಂಗನಾಯಕನಹಳ್ಳಿಯಲ್ಲಿ 3 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಕಾಮಗಾರಿಗೆ ಎಸ್.ಆರ್.ವಿಶ್ವನಾಥ್ ಚಾಲನೆ

ಯಲಹಂಕ : ಯಲಹಂಕ ಕ್ಷೇತ್ರದ ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನೇನಹಳ್ಳಿ ಗ್ರಾಮದಲ್ಲಿ 3 ಕೋಟಿ ರೂಪಾಯಿ ಅಂದಾಜು ವೆಚ್ಚದ ರಾಜಕಾಲುವೆ ನಿರ್ಮಾಣ ಕಾಮಗಾರಿಗೆ ಶಾಸಕ ಎಸ್.ಆರ್.ವಿಶ್ವನಾಥ್ ಸೋಮವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿ ಅವರು, ‘ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯಿತಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರತಿಷ್ಠಿತ ಗ್ರಾಮ ಪಂಚಾಯಿತಿಯಾಗಿದ್ದು, ಗ್ರಾಮಗಳ ಬೆಳವಣಿಗೆಗೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಿರುವುದು ಶಾಸಕನಾಗಿ ನನ್ನ ಕರ್ತವ್ಯ. ಈ ದಿಸೆಯಲ್ಲಿ ಗ್ರಾಮಗಳ ಪ್ರಗತಿಗೆ ಒತ್ತು ನೀಡಿ ಶ್ರಮಿಸಲಾಗುತ್ತಿದೆ. ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಅನುದಾನದ ಅಡಿಯಲ್ಲಿ 3 ಕೋಟಿ ರೂ. ಅಂದಾಜು ವೆಚ್ಚದಲ್ಲಿ ರಾಜಕಾಲುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ರಾಜಕಾಲುವೆ ಹೊನ್ನೇನಹಳ್ಳಿ ಕೆರೆಯಿಂದ ಆರಂಭಗೊಂಡು ಸಿಂಗನಾಯಕನ ಹಳ್ಳಿ ಕೆರೆಯವರೆಗೆ ನಿರ್ಮಾಣಗೊಳ್ಳಲಿದೆ. ಈ ಬಗ್ಗೆ ಗ್ರಾಮಸ್ಥರಿಂದ ಬಹಳ ದಿನಗಳಿಂದ ಬೇಡಿಕೆ ಇತ್ತು, ಈ ನಿಟ್ಟಿನಲ್ಲಿಂದು ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕಾಮಗಾರಿ ನಿರ್ವಹಣೆಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡುವುದರ ಜೊತೆಗೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಸರ್ಕಾರದ ಅನುದಾನದ ಕೊರತೆಯ ನಡುವೆಯೂ ಲಭ್ಯ ಅನುದಾನದ ಅಡಿಯಲ್ಲಿ ಗ್ರಾಮಗಳ ಪ್ರಗತಿಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ, ಮುಖಂಡರಾದ ಚೊಕ್ಕನಹಳ್ಳಿ ವೆಂಕಟೇಶ್, ಹಿಂದೂ ಜಾಗರಣ ವೇದಿಕೆಯ ರಾಜಣ್ಣ, ಸಿಂಗನಾಯಕನಹಳ್ಳಿ ಗ್ರಾ.ಪಂ.ಅಧ್ಯಕ್ಷೆ ಅಮರಾವತಮ್ಮ, ಉಪಾಧ್ಯಕ್ಷ ಜಿ.ಸಿ.ಮಂಜುನಾಥ್, ಮಾಜಿ ಅಧ್ಯಕ್ಷರಾದ ಟಿ.ಮುನಿರೆಡ್ಡಿ, ಮಾಜಿ ಉಪಾಧ್ಯಕ್ಷರಾದ ಎಸ್.ಜಿ.ಪ್ರಶಾಂತ್ ರೆಡ್ಡಿ, ಹೇಮಂತ್ ಕುಮಾರ್, ಗ್ರಾ.ಪಂ. ಸದಸ್ಯರಾದ ಮಲ್ಲೇಶ್, ಕೆ. ಬಾಬು, ಸುಧಾ ಅಂಬರೀಶ್, ಬಿಜೆಪಿ ಮುಖಂಡರಾದ ಎಚ್.ಎನ್.ಧನರಾಜ್ ಮತ್ತಿತತರರಿದ್ದರು.