ಮುಂಡರಗಿ: ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಮತ್ತು ಸತತ ಪರಿಶ್ರಮವಿದ್ದರೆ ಶಿಕ್ಷಣ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಬಹುದು. ಪ್ರತಿಯೊಂದು ವಿಷಯಕ್ಕೆ ತನ್ನದೇ ಆದ ಸೌಂದರ್ಯವಿರುತ್ತದೆ. ಯಾವ ಕೋರ್ಸ್‌ಗೆ ಹೆಚ್ಚು ಮಾನ್ಯತೆ ಸಿಗುತ್ತದೆ ಎಂಬುದನ್ನು ಮನಗಂಡು ಆ ಕೋರ್ಸ್ ಆಯ್ದುಕೊಂಡರೆ ಜೀವನ ಪರಿಪೂರ್ಣವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಶಿಕ್ಷಣ ಮಾಹಾವಿದ್ಯಾಲಯದ ಆವರಣದಲ್ಲಿ ಮಂಗಳವಾರ ಶ್ರೀ ಜಗದ್ಗುರು ಅನ್ನದಾನೀಶ್ವರ ವಿದ್ಯಾ ಸಮಿತಿಯ ಜಗದ್ಗುರು ಅನ್ನದಾನೀಶ್ವರ ಮಹಿಳಾ ವಾಣಿಜ್ಯ ಮಹಾವಿದ್ಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣ ಕ್ಷೇತ್ರದಲ್ಲಿ ಮುಂಡರಗಿ ಡಾ. ಅನ್ನದಾನೀಶ್ವರ ಶ್ರೀಗಳು ಕ್ರಾಂತಿಯನ್ನೇ ಮಾಡಿದ್ದಾರೆ. ಮಹಿಳೆಯರಿಗಾಗಿಯೇ ಪ್ರತ್ಯೇಕ ಮಹಾವಿದ್ಯಾಲಯ ಸ್ಥಾಪಿಸಿ ಅವರ ಶಿಕ್ಷಣಕ್ಕೆ ಅನುಕೂಲ ಮಾಡಿಕೊಟ್ಟಿರುವುದು ವಿಶೇಷ. ಈ ಮಹಾವಿದ್ಯಾಲಯದಲ್ಲಿ ವಿವಿಧ ಕೋರ್ಸ್‌ಗಳನ್ನು ತಂದು ಸಾಕಷ್ಟು ಮಹಿಳೆಯರು ಕಲಿಯುವಂತೆ ವ್ಯವಸ್ಥೆ ಮಾಡಿಕೊಡಬೇಕು ಎಂದರು.
ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಮಹಿಳೆಯರಿಗಾಗಿ ಶ್ರೀಗಳು ವಿಶೇಷ ಶಾಲಾ- ಕಾಲೇಜ್‌ಗಳನ್ನು ಪ್ರಾರಂಭಿಸಿದ್ದಾರೆ. ಶ್ರೀಗಳ ಸಾಮಾಜಿಕ ಸೇವೆ, ಸಾಹಿತ್ಯ ಸೇವೆ ಮತ್ತು ಧಾರ್ಮಿಕ ಸೇವೆ ಅಗ್ರಗಣ್ಯ ಎಂದರು. ಹುಬ್ಬಳ್ಳಿಯ ಅವ್ವಾ ಸೇವಾ ಟ್ರಸ್ಟ್‌ನ ಸಂಚಾಲಕ ಡಾ. ಬಸವರಾಜ ಧಾರವಾಡ ಮಾತನಾಡಿದರು.
ಸಾನ್ನಿಧ್ಯ ವಹಿಸಿದ್ದ ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿ ಆಶೀರ್ವಚನ ನೀಡಿ, ಇಂದಿನ ಪರಿಸ್ಥಿತಿಯಲ್ಲಿ ಮಠಗಳು ಶಾಲಾ-ಕಾಲೇಜುಗಳನ್ನು ನಡೆಸುವುದು ಕಷ್ಟಕರವಾಗಿದೆ. ಶಿಕ್ಷಕರಿಗೆ ವೇತನ ನೀಡಿ ನಡೆಸುವುದು ಕಷ್ಟಸಾಧ್ಯವಾಗುತ್ತಿದೆ. ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಿಕೊಳ್ಳಲು ಸರ್ಕಾರ ಅನುಮತಿ ನೀಡಬೇಕು ಎಂದರು.