ಹುಬ್ಬಳ್ಳಿ: ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿಗೆ ಆಗಸ್ಟ್ 1ರೊಳಗೆ ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸಂಸದ ಗೋವಿಂದ ಕಾರಜೋಳ ಎಚ್ಚರಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೋಷಿತರಿಗೆ ನ್ಯಾಯ ಸಿಗಬೇಕು ಎಂಬ ಉದ್ದೇಶದಿಂದ ಮೀಸಲಾತಿಗಾಗಿ ಹೋರಾಟ ಮಾಡಲಾಗುತ್ತಿದೆ. ಸುಪ್ರೀಂ ಕೋರ್ಟ್ ಕೂಡ ಮೀಸಲಾತಿ ನೀಡಬೇಕೆಂದು ಹೇಳಿದೆ. ಈಗಾಗಲೇ ಕೇರಳ, ತಮಿಳುನಾಡಿನಲ್ಲಿ ಮೀಸಲಾತಿ ಜಾರಿಗೆ ತರಲಾಗಿದೆ. ಇದೇ ರೀತಿ ಇಲ್ಲಿಯೂ ಜಾರಿಯಾಗಬೇಕು ಎಂದರು.
ಕಾಂಗ್ರೆಸ್ ಚುನಾವಣೆ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ಮೀಸಲಾತಿ ನೀಡುವುದಾಗಿ ಘೋಷಿಸಿತ್ತು. ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಇನ್ನೂ ಜಾರಿಯಾಗಿಲ್ಲ. ರಾಜ್ಯ ಸರ್ಕಾರ ಆ. 1ರೊಳಗೆ ನ್ಯಾ. ನಾಗಮೋಹನ ದಾಸ ವರದಿ ಅನುಷ್ಠಾನ ಮಾಡಬೇಕು. ಇಲ್ಲವಾದರೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಲಾಗುವುದು ಎಂದು ಹೇಳಿದರು.
ನಮ್ಮ ಮನವಿಗೆ ಸರ್ಕಾರ ಸ್ಪಂದಿಸದಿದ್ದರೆ ಅಧಿವೇಶನ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಅಸಹಕಾರ ಚಳವಳಿ ಮಾಡಲಾಗುವುದು. ರಾಜ್ಯದ ಸಚಿವರ ಪ್ರವಾಸದ ಸಂದರ್ಭದಲ್ಲಿ ಮುತ್ತಿಗೆ ಹಾಕಲಾಗುವುದು ಎಂದರು.
ಮಾಜಿ ಸಚಿವ ಎ. ನಾರಾಯಣಸ್ವಾಮಿ ಮಾತನಾಡಿ, ಸಿದ್ದರಾಮಯ್ಯ ಹಿಂದುಳಿದ ವರ್ಗದವರಿಗೆ ಮೋಸ ಮಾಡಿದ್ದಾರೆ. ಅವರಿಗೆ ನ್ಯಾಯ ದೊರಕಿಸಿ ಕೊಡುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಹಿಂದುಳಿದವರ ತಾಳ್ಮೆಯ ಕಟ್ಟೆ ಒಡೆದಿದ್ದು, ಹೋರಾಟ ಅನಿವಾರ್ಯವಾಗಿದೆ ಎಂದರು.
ಮುಖ್ಯಮಂತ್ರಿಗಳ ಮೇಲೆ ರಾಜ್ಯದ ಜನರ ವಿಶ್ವಾಸ ಹೋಗಿದೆ. ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಅವರು ಮೀಸಲಾತಿ ಕೊಟ್ಟಿದ್ದರೆ ಹಿಂದುಳಿದವರ ಬದುಕು ಹಸನಾಗುತ್ತಿತ್ತು. ಇದಾವುದನ್ನೂ ಸರ್ಕಾರ ಮಾಡಲಿಲ್ಲ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ, ವಸಂತ ನಾಡಜೋಶಿ, ಬಸವರಾಜ ಗರಗ, ರಾಜು ಕೋರ್ಯಾಣಮಠ ಇತರರು ಇದ್ದರು.