ಗದಗ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸರ್ಕಾರಿ ಸೌಲಭ್ಯಗಳನ್ನು ಸೂಕ್ತ ಸಮಯದಲ್ಲಿ ತಲುಪಿಸುವಲ್ಲಿ ಇಲಾಖಾಧಿಕಾರಿಗಳು ವಿಶೇಷ ಆಸಕ್ತಿಯಿಂದ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದಿಂದ ಬಿಡುಗಡೆಯಾಗಿರುವ ಎಸ್‌ಸಿಪಿ, ಟಿ.ಎಸ್.ಪಿ.ಅನುದಾನ ಸದ್ಭಳಕೆಯಾಗಬೇಕು. ಬಿಡುಗಡೆಯಾದ ಅನುದಾನ ಲ್ಯಾಪ್ಸ್ ಆಗದಂತೆ ಇಲಾಖೆಯ ಅಧಿಕಾರಿಗಳು ನೋಡಿಕೊಳ್ಳಬೇಕು. ಪ್ರವಾಹದಿಂದ ಸ್ಥಳಾಂತರಗೊಂಡ ಕುಟುಂಬಗಳು, ಕಳಪೆ ರಸ್ತೆ ಕಾಮಗಾರಿ ಅಂಬೇಡ್ಕರ್ ವೃತ್ತದಲ್ಲಿ ಬೀದಿ ದೀಪಗಳ ವ್ಯವಸ್ಥೆ, ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ, ಹಕ್ಕುಪತ್ರಗಳ ವಿತರಣೆ ಕುರಿತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರಿಂದ ಕುಂದುಕೊರತೆಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು ಸಂಬಂಧಿತ ಇಲಾಖೆಗಳು ಆದಷ್ಟು ಶೀಘ್ರ ಈ ಕುರಿತು ಕಾಳಜಿ ವಹಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಅವರು ಮಾತನಾಡಿ ಜಿಲ್ಲೆಯಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತಹ ದೂರುಗಳನ್ನು ವಿಳಂಬ ಮಾಡದೇ ಸಂಬಂಧಿತ ಪೊಲೀಸ ಅಧಿಕಾರಿಗಳು ದಾಖಲಿಸಿಕೊಳ್ಳಬೇಕು. ಅದೇ ರೀತಿ ಪ.ಜಾ/ಪ.ಪಂ. ದೌರ್ಜನ್ನು ಪ್ರಕರಣಗಳನ್ನು ದಾಖಲಿಸಿಕೊಳ್ಳಲು ಅನಗತ್ಯವಾಗಿ ವಿಳಂಬ ತೋರಿದಲ್ಲಿ ಅಂತಹ ಪೊಲೀಸ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ಹೊಂಬಳ ನಾಕಾದ ಹತ್ತಿರವಿರುವ ರುದ್ರಭೂಮಿಯ ಅಭಿವೃದ್ಧಿ, ಗ್ರಾಮೀಣ ಪ್ರದೇಶಗಳಲ್ಲಿ ದೌರ್ಜನ್ಯಗಳ ಕುರಿತು ಕಾನೂನು ತಿಳುವಳಿಕೆ, ಬಯಲು ಬಹಿರ್ದೆಸೆ ಮುಕ್ತ ಗ್ರಾಮಕ್ಕೆ ಕ್ರಮ, ಅಂಬೇಡ್ಕರ್ ಆವಾಸ್ ಯೋಜನೆಯಡಿ ಮನೆ ನಿರ್ಮಾಣ, ನಾಗರಾಳ ಗ್ರಾಮಕ್ಕೆ ಅಂಬೇಡ್ಕರ್ ಭವನ ನಿರ್ಮಾಣ, ಅಂಬೇಡ್ಕರ್ ನಗರದಲ್ಲಿ ಗ್ರಂಥಾಲಯ ನಿರ್ಮಾಣವಾಗಿದ್ದು ಅದರ ಉದ್ಘಾಟನೆ ಕಾರ್ಯ, ಕೌಶಲ್ಯ ಅಭಿವೃದ್ಧಿ ಯೋಜನೆಯಿಂದ, ಹಕ್ಕು ಪತ್ರ ವಿತರಣೆ, ಎಸ್.ಸಿ.ಎಸ್.ಟಿ. ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ, ಪ್ರತಿಷ್ಟಿತ ಶಾಲೆಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಕ್ಕಳ ಪ್ರವೇಶಾತಿ, ಹಕ್ಕು ಪತ್ರ ವಿತರಣೆಗೆ ವಿಳಂಭ, ಸಮುದಾಯದ ಯುವಕರಿಗೆ ವಾಹನ ಚಾಲನಾ ತರಬೇತಿ, ನಕಲಿ ಜಾತಿ ಪ್ರಮಾಣ ಪತ್ರ ಕುರಿತು, ವಾಲ್ಮೀಕಿ ಭವನಕ್ಕೆ ರಸ್ತೆ ನಿರ್ಮಾಣ ಸೇರಿದಂತೆ ಹಲವಾರು ಅಹವಾಲುಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ, ಡಿವೈ ಎಸ್ ಪಿ ಎಂ.ಬಿ. ಸಂಕದ, ವೈ.ಎಸ್. ವಾಗದ ಗೌಡರ, ತಮ್ಮರಾಯ ಪಾಟೀಲ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡದ ಸಂಘ ಸಂಸ್ಥೆಯ ಪದಾಧಿಕಾರಿಗಳು, ಸಮುದಾಯದವರು ಹಾಜರಿದ್ದರು.