ಕುಶಾಲನಗರ:
ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜತೆಗೆ ಆಂಗ್ಲ ಭಾಷೆಯ ಕೌಶಲ್ಯ ಬೆಳೆಸಲು ಆಂಗ್ಲ ಮಾಧ್ಯಮ ಶಿಕ್ಷಣ ಸಹಕಾರಿಯಾಗಲಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಅಭಿವೃದ್ಧಿ) ಸಿ. ರಂಗಧಾಮಪ್ಪ ಹೇಳಿದರು. ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭವಾದ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಪೋಷಕರು ಮತ್ತು ಗ್ರಾಮಸ್ಥರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸಹಕರಿಸಬೇಕು. ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸುವ ಕಾರ್ಯಕ್ರಮಗಳ ಭಾಗವಾಗಿ ರಾಜ್ಯ ಸರ್ಕಾರ ಇದೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪ್ರಸ್ತುತ ಬೋಧಿಸುತ್ತಿರುವ ಕನ್ನಡ ಮಾಧ್ಯಮದ ಜತೆಗೆ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲಾಗುತ್ತಿದೆ.
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 47 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಶಿಕ್ಷಣ ಶುರುಮಾಡಲಾಗುತ್ತಿದ್ದು, ಜಿಲ್ಲೆಯಲ್ಲಿ ಈಗ ಒಟ್ಟು 74 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ ಎಂದರು.
ಆಂಗ್ಲ ಮಾಧ್ಯಮ ಶಿಕ್ಷಣ ಕಲಿಕಾ ತರಗತಿಗೆ ಚಾಲನೆ ನೀಡಿ ಮಾತನಾಡಿದ ಕೂಡ್ಲೂರು ಗ್ರಾಮದ ಪ್ರವಾಸೋದ್ಯಮಿ ಕೆ.ಕೆ. ಮಂಜುನಾಥ್ ಕುಮಾರ್, ಆಂಗ್ಲ ಮಾಧ್ಯಮ ಶಿಕ್ಷಣ ಮೊದಲು ಹಣವುಳ್ಳ ಕೆಲವರ ಸ್ವತ್ತಾಗಿತ್ತು. ಈಗ ಕಾಲ ಬದಲಾಗಿದೆ. ಈಗ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸುತ್ತಿರುವುದರಿAದ ಗ್ರಾಮಾಂತರ ಪ್ರದೇಶಗಳ ಬಡ ಕೂಲಿ ಕಾರ್ಮಿಕರ ಮಕ್ಕಳು ಕೂಡ ಉತ್ತಮ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ.
ರಾಜ್ಯ ಸರ್ಕಾರವು ಈ ಶಾಲೆಯು ಸೇರಿದಂತೆ ಆಂಗ್ಲ ಮಾಧ್ಯಮ ಆರಂಭಿಸುವ ಮೂಲಕ ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ 4,134 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿದ್ದು, ಗುಣಮಟ್ಟದ ಶಿಕ್ಷಣಕ್ಕೆ ವಿಶೇಷ ಒತ್ತು ನೀಡುತ್ತಿದೆ ಎಂದು ಹೇಳಿದರು.
ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ. ಭಾಸ್ಕರ್ ನಾಯಕ್ ಮಾತನಾಡಿ ಈ ಶಾಲೆಯಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭಿಸುತ್ತಿರುವುದು ತುಂಬಾ ಖುಷಿ ತಂದಿದೆ. ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಗ್ರಾಮ ಪಂಚಾಯತಿ ಸಹಕಾರ ಮತ್ತು ಪ್ರೋತ್ಸಾಹ ನೀಡಲಾಗುವುದು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಭಾಗ್ಯಮ್ಮ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮ ಉತ್ತಮವಾದುದ್ದು. ಸೋಮವಾರಪೇಟೆ ತಾಲ್ಲೂಕಿನಲ್ಲಿ 15 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂ ಸಿ ಅಧ್ಯಕ್ಷ ಪ್ರಕಾಶ್ ಮಾತನಾಡಿ, ಗ್ರಾಮಾಂತರ ಪ್ರದೇಶದ ನಮ್ಮ ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿರುವುದು ಹೆಮ್ಮೆ ತಂದಿದೆ ಎಂದರು.
ಶಾಲಾ ಮುಖ್ಯ ಶಿಕ್ಷಕಿ ಎಚ್.ಎಸ್. ಸುಜಾತ, ಸಿ.ಆರ್.ಪಿ., ಕೆ. ಶಾಂತಕುಮಾರ್, ಮಂಡಲ ಪಂಚಾಯತಿ ಮಾಜಿ ಪ್ರಧಾನ ಕೆ.ಎಸ್. ರಾಜಾಚಾರಿ ಮಾತನಾಡಿದರು.
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್, ಗ್ರಾ.ಪಂ. ಪಿಡಿಓ ಎಂ.ಆರ್. ಸಂತೋಷ್, ಎಸ್‌ಡಿಎಂಸಿ ಉಪಾಧ್ಯಕ್ಷೆ ಪವಿತ್ರ, ಸದಸ್ಯರಾದ ಪೂಜಾ, ಅರ್ಪಿತ, ಯಮುನ, ಸುಮತಿ, ಪ್ರಾಥಮಿಕ ಶಾಲೆಯ ಶಿಕ್ಷಕರು, ಪೋಷಕರು
ವಿದ್ಯಾರ್ಥಿಗಳು ಇದ್ದರು.