ಉಡುಪಿ: ಜಿಲ್ಲಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಎಚ್ಚರಿಕೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜುಲೈ 20ರಂದು ಜಿಲ್ಲಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದೆ. ಜಿಲ್ಲೆಯ ಎಲ್ಲ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಕ್ಕಳ ಜೀವ ರಕ್ಷಣೆ ಹಿನ್ನೆಲೆಯಲ್ಲಿ ಹಾಗೂ ಮುಂಜಾಗ್ರತಾ ಕ್ರಮದ ಹಿನ್ನೆಲೆಯಲ್ಲಿ ಶಾಲೆಗೆ ರಜೇ ನೀಡಲಾಗುತ್ತಿದೆ. ಈ ಹೆಚ್ಚುವರಿ ರಜೆಯಿಂದಾಗಿ ಕಲಿಕಾ ಸಮಯ ನಷ್ಟವಾಗಿದೆ. ಹೀಗಾಗಿ ಅದನ್ನು ಸರಿದೂಗಿಸಲು ಶನಿವಾರ ಮಧ್ಯಾಹ್ಮ ಅಥವಾ ಭಾನುವಾರದಂದು ಹೆಚ್ಚುವರಿ ತರಗತಿ ನಡೆಸಿ, ಆದ ಕಲಿಕಾ ನಷ್ಟವನ್ನು ಸರಿಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಶಾಲಾ-ಕಾಲೇಜುಗಳಿಗೆ ಸೂಚನೆ ನೀಡಿದ್ದಾರೆ. ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದಲ್ಲಿ ತುರ್ತು ಸೇವೆಯ ಟೋಲ್ ಫ್ರೀ ಸಂಖ್ಯೆ 1077 ಹಾಗೂ 0820-2574802 ನಂಬರ್ ಸಂಪರ್ಕಿಸುವಂತೆಯೂ ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಬಿರುಸಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 20 ರಂದು ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಹವಾಮಾನ ಇಲಾಖೆಯು ಶನಿವಾರ ಜಿಲ್ಲೆಯಲ್ಲಿ ರೆಡ್ ಅಲೆರ್ಟ್ ಘೋಷಿಸಿದೆ.