ಬೆಂಗಳೂರು : ಮಕ್ಕಳ ಶೈಕ್ಷಣಿಕ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಜತೆ ರ್ಚಚಿಸಿ ಕ್ರಮ ಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದರು.
ಬುಧವಾರ ವಿಧಾನಸೌಧದಲ್ಲಿ ಖಾಸಗಿ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಅವರು, ಬಹು ದಿನಗಳ ಕಾಲ ಮಕ್ಕಳು ಶಾಲೆಯಿಂದ ಹೊರಗುಳಿಯುವುದರಿಂದ ಆಗುತ್ತಿರುವ ಸಾಮಾಜಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳೊಂದಿಗೆ ಶಾಲೆಗಳನ್ನು ಆರಂಭಿಸುವುದು ಉಚಿತವೆಂದು ಇತ್ತೀಚಿಗೆ ವಿಧಾನಪರಿಷತ್ತಿನ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಶಾಲಾ-ಕಾಲೇಜುಗಳು ಆರಂಭವಾಗದೇ ಇರುವುದರಿಂದ ಪೋಷಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಮುಂದಿನ ವ್ಯಾಸಂಗಕ್ಕಾಗಿ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಬೇಕಾದ ಅನಿವಾರ್ಯತೆ ಇದೆ. ಆದ್ದರಿಂದ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ನಿರ್ಧಾರಕ್ಕೆ ಬರಲಾಗುತ್ತದೆ ಎಂದರು.
ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ಕೋವಿಡ್ ಹಿನ್ನೆಲೆಯಲ್ಲಿ ಯಾವುದೇ ರಾಜ್ಯದಲ್ಲೂ ಶಾಲೆಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿಲ್ಲ. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಉನ್ನತ ಶಿಕ್ಷಣ ಹಾಗೂ ವಿಶ್ವವಿದ್ಯಾನಿಲಯಗಳ ತರಗತಿಗಳನ್ನು ಆರಂಭಿಸಲಾಗಿದೆ. ಶಾಲಾ ಶಿಕ್ಷಣ ಕುರಿತು ಶೀಘ್ರದಲ್ಲೇ ಮುಖ್ಯಮಂತ್ರಿಗಳೊಂದಿಗೆ ರ್ಚಚಿಸಿ ಒಂದು ನಿರ್ಧಾರಕ್ಕೆ ಬರಲಾಗುವುದು. ವಿಧಾನಪರಿಷತ್ ಸದಸ್ಯ ಅರುಣ್ ಶಹಾಪುರ ಶಾಲೆಗಳು ಸಕಾಲದಲ್ಲಿ ಆರಂಭವಾಗದೇ ಇರುವುದರಿಂದ ಮಕ್ಕಳಿಗೆ ಆಗಿರುವ ತೊಂದರೆಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಇದರಿಂದಾಗಿರುವ ಸಮಸ್ಯೆಗಳನ್ನು ಸಭೆಯ ಗಮನಕ್ಕೆ ತಂದರು.
ಖಾಸಗಿ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಮಂಗಳೂರಿನ ಶಾರದಾ ವಿದ್ಯಾಸಂಸ್ಥೆ ಅಧ್ಯಕ್ಷ ಪೊ›. ಎಂ. ಬಿ. ಪುರಾಣಿಕ್, ಎಕ್ಸ್ಪರ್ಟ್ ವಿದ್ಯಾಸಂಸ್ಥೆ ಅಧ್ಯಕ್ಷ ಪೊ›. ನರೇಂದ್ರ ನಾಯಕ್, ಶಕ್ತಿ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಕೆ.ಸಿ. ನಾಯಕ್, ದಾವಣಗೆರೆ ವಿಶ್ವೇಶ್ವರಯ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶ್ರೀಧರ, ಕಲ್ಲಡ್ಕ ಶ್ರೀರಾಮ ವಿದ್ಯಾಮಂದಿರದ ಸಂಚಾಲಕ ವಸಂತ ಮಾಧವ, ಹೆಬ್ರಿ ಎಸ್.ಆರ್. ಪಿಯು ಕಾಲೇಜು ಸಂಸ್ಥೆಯ ಅಧ್ಯಕ್ಷ ನಾಗರಾಜಶೆಟ್ಟಿ ಸೇರಿ ರಾಜ್ಯದ ವಿವಿಧ ಭಾಗಗಳ 20ಕ್ಕೂ ಹೆಚ್ಚು ಪ್ರತಿನಿಧಿಗಳು, ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್, ಶಿಕ್ಷಣ ಇಲಾಖೆ ಅಧಿಕಾರಿಗಳು ಸಭೆಯಲ್ಲಿದ್ದರು.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್ಗಾಗಿ ನಮ್ಮ ಫೇಸ್ಬುಕ್ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..