ಜಿಲ್ಲೆ

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

ಸುನಿಲ್ ಪೊನ್ನೇಟಿ

ಭಾಗಮಂಡಲ:

ಶ್ರೀ ಕಾವೇರಿ ಜನ್ಮ ಭೂಮಿ ಟ್ರಸ್ಟ್ ಸ್ಥಾಪಕ, ಕರ್ನಾಟಕ ಉಚ್ಛ ನ್ಯಾಯಾಲಯದ ಹಿರಿಯ ವಕೀಲ ಚೇರಂಗಾಲ ಗ್ರಾಮದ ಮೊಟ್ಟನ ಸಿ. ರವಿಕುಮಾರ್ ಅವರು ಭಾಗಮಂಡಲದ ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜಿನ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಉದ್ದೇಶದಿಂದ 1 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಪಿ.ಯು.ಸಿ ವಿಭಾಗದ ಒಟ್ಟು 12 ವಿದ್ಯಾರ್ಥಿಗಳ ಒಂದು ವರ್ಷದ ಶೈಕ್ಷಣಿಕ ವೆಚ್ಚ ಭರಿಸಲು ಈ ವಿದ್ಯಾರ್ಥಿ ವೇತನವನ್ನು ಇತ್ತೀಚೆಗೆ ನಡೆದ ಸಮಾರಂಭದಲ್ಲಿ ವಿತರಿಸಲಾಯಿತು.

ಶ್ರೀ ಕಾವೇರಿ ವಿದ್ಯಾ ಸಂಘದ ನಿರ್ದೇಶಕ ಕುಯ್ಯಮುಡಿ ಮನೋಜ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ಮನೋಜ್, ಮೊಟ್ಟನ ಸಿ ರವಿಕುಮಾರ್ ರವರ ಉದಾರತೆಯನ್ನು ಶ್ಲಾಘಿಸಿದರು. ಕಳೆದ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ದಾಖಲಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಈ ರೀತಿಯ ಪ್ರೊತ್ಸಾಹ ಧನ ವಿದ್ಯಾರ್ಥಿಗಳ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾಚಟುವಟಿಕೆಗಳಿಗೆ ಸ್ಫೂರ್ತಿಯಾಗಲಿ ಎಂದು ಆಶಿಸಿದರು.

ಕಾಲೇಜಿನ ಪ್ರಾಂಶುಪಾಲ ದಿವಾಕರ ಕೆ. ಜೆ. ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡುವ ಉದ್ದೇಶದಿಂದ ಸಂಜೆ ನಾಲ್ಕು ಗಂಟೆ ನಂತರವೂ ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾದ ತಾಲೂಕು ಮತ್ತು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮತ್ತು ಈ ಬಾರಿ ರಾಜ್ಯಮಟ್ಟವನ್ನು ಪ್ರತಿನಿಧಿಸಿದ 6 ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.